ಬೆಂಗಳೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಏಪ್ರಿಲ್ 13ರಿಂದ 20ರವರೆಗೆ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್ ಅವರ ಜಯಂತಿ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
“ಡಾ. ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಸಾಮಾಜಿಕ ನ್ಯಾಯದ ಹರಿಕಾರರು ಮತ್ತು ಸಮಾನತೆಯ ಸಂಕೇತವಾಗಿದ್ದರು. ಹಲವು ವರ್ಷಗಳ ಹಿಂದೆಯೇ ಅಭಿವೃದ್ಧಿಶೀಲ ಭಾರತಕ್ಕೆ ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಅವರು,” ಎಂದು ಕಾರಜೋಳ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳನ್ನು ‘ಪಂಚತೀರ್ಥ’ಗಳಾಗಿ ಅಭಿವೃದ್ಧಿಪಡಿಸಿರುವುದನ್ನು ಸ್ಮರಿಸಿದ ಅವರು, ಸಂವಿಧಾನ ದಿನವನ್ನು ಆಚರಿಸುವ ಮೂಲಕ ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

“ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿಯಾಗಿದ್ದಂತೆ ಸಾಮಾಜಿಕ ಸಾಮರಸ್ಯದ ಪ್ರವರ್ತಕರೂ ಆಗಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸೌಲಭ್ಯ ವಂಚಿತರ ಕಲ್ಯಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಅಂಬೇಡ್ಕರ್ ಅವರಿಗೆ ಇಡೀ ರಾಷ್ಟ್ರ ಋಣಿಯಾಗಿದೆ,” ಎಂದು ಕಾರಜೋಳ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಎಸ್‌ಸಿ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲೆ ಅಧ್ಯಕ್ಷ ಅಣ್ಣಯ್ಯ ಉಪಸ್ಥಿತರಿದ್ದರು.












