ಬೆಂಗಳೂರು: ಅನಧಿಕೃತವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಘೋಷಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೋಲಾರದ ಕೆಂದಟ್ಟಿ ಗ್ರಾಮದಲ್ಲಿ 10 ಎಕರೆ ಜಮೀನಿನಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಕೋಲಾರ ನಗರಸಭೆ ವ್ಯಾಪ್ತಿಯ ಘನತ್ಯಾಜ್ಯವನ್ನು ಈ ಘಟಕದ ಮೂಲಕ ಸಂಸ್ಕರಿಸಲಾಗುತ್ತಿದ್ದು, ದಿನಕ್ಕೆ 35 ಟನ್ ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ ‘ಕೋಲಾರ ಅಗ್ರಿಗೋಲ್ಡ್’ ಬ್ರಾಂಡ್‌ನಡಿ ಮಾರಾಟ ಮಾಡಲಾಗುತ್ತಿದೆ. ಇದರ ಜೊತೆಗೆ, ಮಣಿಘಟ್ಟ ರಸ್ತೆಯ ಬಳಿಯ ಮತ್ತು ಕೆಂದಟ್ಟಿಯ ಸಂಗ್ರಹಣಾ ಘಟಕದಲ್ಲಿ ತ್ಯಾಜ್ಯವನ್ನು ಮರುಬಳಕೆಗಾಗಿ ಸಂಸ್ಕರಿಸಿ, ಆದಾಯವನ್ನು ನಗರಸಭೆಗೆ ಒದಗಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ನಿರಂತರ ಅರಿವು ಮೂಡಿಸಲಾಗುತ್ತಿದ್ದರೂ, ಕೆಲವರು ಅನಧಿಕೃತವಾಗಿ ತ್ಯಾಜ್ಯ ಸುರಿಯುತ್ತಿರುವುದು ಕಂಡುಬಂದಿದೆ. ಇಂತಹ ಸ್ಥಳಗಳನ್ನು ಗುರುತಿಸಿ, ಅಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಂಡ ವಿಧಿಸುವ ಕ್ರಮ ಕೈಗೊಳ್ಳಲಾಗಿದ್ದು, ಮುಂದುವರಿದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಹೀಂ ಖಾನ್ ಎಚ್ಚರಿಕೆ ನೀಡಿದ್ದಾರೆ.