ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡೂ ಪ್ರಮುಖವಾಗಿದ್ದು, ಇವುಗಳ ಸಮತೋಲನ ಕಾಯ್ದುಕೊಂಡು ಪರಸ್ಪರ ಸಮನ್ವಯದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಉಪಸ್ಥಿತಿಯಲ್ಲಿ ನಡೆದ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು, ಕಂದಾಯ, ಅರಣ್ಯ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳು ನೆನೆಗುದಿಗೆ ಬಿದ್ದಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಉಭಯ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ-ಸೂಚನೆಗಳನ್ನು ನೀಡಿದರು.
ಸರ್ವೋಚ್ಛ ನ್ಯಾಯಾಲಯದ ಅರಣ್ಯ ನಿಯಮಾವಳಿಗಳ ಕಠಿಣ ನಿಲುವನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ನೀರು, ವಿದ್ಯುತ್ ಸಂಪರ್ಕದಂತಹ ಮೂಲಭೂತ ಸೌಕರ್ಯಗಳಿಗೆ ಮಾನವೀಯ ದೃಷ್ಟಿಕೋನದಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಒತ್ತಿ ಹೇಳಿದರು. ಅರಣ್ಯ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳುವ ಜೊತೆಗೆ, ಮೂಲಭೂತ ಸೌಕರ್ಯಗಳಿಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಪರಿಭಾವಿತ ಅರಣ್ಯ ಪ್ರದೇಶಗಳ ನಕಾಶೆಯನ್ನು ಸರಿಪಡಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಸಿ ಗೊಂದಲಗಳನ್ನು ಇತ್ಯರ್ಥಗೊಳಿಸುವಂತೆ ಸಚಿವರು ನಿರ್ದೇಶಿಸಿದರು. ಬೆಂಗಳೂರು-ಸೋಮವಾರಪೇಟೆ ರಾಜ್ಯ ಹೆದ್ದಾರಿ, ರಸ್ತೆ ಕಾಮಗಾರಿಗಳು, ನೀರು ಸರಬರಾಜು ಯೋಜನೆಗಳಿಗೆ ಉಂಟಾದ ಅಡ್ಡಿಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.
ನಿಯಮಾವಳಿಗಳ ವ್ಯಾಪ್ತಿಯಲ್ಲಿ ಪರಿಹಾರ ಮಾರ್ಗಗಳನ್ನು ಕಂಡುಕೊಂಡು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಚಲುವರಾಯಸ್ವಾಮಿ ಮತ್ತು ಈಶ್ವರ್ ಖಂಡ್ರೆ ಸೂಚನೆ ನೀಡಿದರು. ರಾಜ್ಯ ವ್ಯಾಪ್ತಿಯಲ್ಲಿ ಬದಲಿ ಜಾಗ ಪಡೆದು ಮಾಡಬಹುದಾದ ಮಾರ್ಪಾಡುಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಒತ್ತಾಯಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಅರಣ್ಯ ಇಲಾಖೆಯಿಂದ ಅನುಮತಿ ಬೇಕಿರುವ ಕಾಮಗಾರಿಗಳ ವಿವರವನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ಚೆಸ್ಕಾಂ ಅಧ್ಯಕ್ಷರು, ಶ್ರವಣಬೆಳಗೊಳ ಶಾಸಕ ರಮೇಶ್ ಬಂಡಿ ಸಿದ್ದೇಗೌಡ, ಶಾಸಕರಾದ ಉದಯ್ ಗೌಡ, ದರ್ಶನ್ ಪುಟ್ಟಣ್ಣಯ್ಯ, ರವಿ ಗೌಡ, ಎಚ್.ಟಿ. ಮಂಜು, ಮಧು ಮಾದೇಗೌಡ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.