ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದಡಿ ಆಯೋಜಿಸಲಾಗಿದ್ದ ಮೂರನೇ ವರ್ಷದ ‘ಕರ್ನಾಟಕ ಪೊಲೀಸ್ ರನ್’ (ಪೊಲೀಸ್ ಓಟ) ಸ್ಪರ್ಧೆಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ ಚಾಲನೆ ನೀಡಿದರು.
‘ಡ್ರಗ್ಸ್ ಮುಕ್ತ ಕರ್ನಾಟಕ’, ‘ಸೈಬರ್ ಅಪರಾಧ’ಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ 10 ಕಿ.ಮೀ. ಹಾಗೂ 5 ಕಿ.ಮೀ. ಓಟದ ಸ್ಪರ್ಧೆಗಳು ನಡೆದವು. ಸುಮಾರು 12 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಗೃಹ ಸಚಿವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ, ಜಿಬಿಎ ಆಯುಕ್ತರಾದ ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಎಸ್‌ಬಿಐ ಬೆಂಗಳೂರು ವಲಯ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಯ ಶೌರ್ಯ, ಸೇವೆಯನ್ನು ಸ್ಮರಿಸುವ ಮತ್ತು ಸಾರ್ವಜನಿಕರೊಂದಿಗೆ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ರನ್ ಕಾರ್ಯಕ್ರಮವು ಫಿಟ್‌ನೆಸ್‌ಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಮಾಜದಲ್ಲಿ ದುರಾಲೋಚನೆಗಳ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಇದೇ ರೀತಿಯ ಓಟಗಳು ನಡೆದಿದ್ದು, ಜನರು ಉತ್ಸಾಹದಿಂದ ಭಾಗವಹಿಸಿದರು.











