ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025-26ನೇ ಸಾಲಿನ 5 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದ್ದು, ಅನುಮೋದನೆಗೆ ಕಾಯುತ್ತಿದೆ. ಶಿಕ್ಷಣ, ಆರೋಗ್ಯ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಂಡಳಿ ಕೈಗೊಂಡಿರುವ ವಿನೂತನ ಯೋಜನೆಗಳಿಗೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಧರಂಸಿಂಗ್ ತಿಳಿಸಿದ್ದಾರೆ.
ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಧರಂಸಿಂಗ್, ರಾಜ್ಯ ಯೋಜನಾ ಖಾತೆ ಸಚಿವ ಡಿ. ಸುದಾಕರ್ ಜೊತೆಗೂಡಿ ರಾಜ್ಯಪಾಲರಿಗೆ ಕ್ರಿಯಾ ಯೋಜನೆಯ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಂಡಳಿಯ ವಿನೂತನ ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ.
ರಾಜ್ಯಪಾಲರು, ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾಗಿರುವ ಹಿನ್ನೆಲೆಯಲ್ಲಿ, ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣ ಸಂಸ್ಥೆಗಳಾದ ವಿಶ್ವವಿದ್ಯಾಲಯಗಳಿಗೂ ಕೆಕೆಆರ್‌ಡಿಬಿ ಅನುದಾನದಲ್ಲಿ ಆದ್ಯತೆ ನೀಡುವಂತೆ ಸಲಹೆ ನೀಡಿದ್ದಾರೆ. “ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಕೆಆರ್‌ಡಿಬಿಯ ಕಾರ್ಯವೈಖರಿಯನ್ನು ರಾಜ್ಯಪಾಲರು ಶ್ಲಾಘಿಸಿದ್ದಾರೆ. ವಿಶ್ವವಿದ್ಯಾಲಯಗಳಿಗೆ ಅನುದಾನ ಹಂಚಿಕೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ” ಎಂದು ಡಾ. ಅಜಯ್ ಧರಂಸಿಂಗ್ ಹೇಳಿದ್ದಾರೆ.
ಡಾ. ನಂಜುಂಡಪ್ಪ ವರದಿಯ ಸಿಡಿಐ ಸೂಚ್ಯಂಕದ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಮೈಕ್ರೋ, ಮ್ಯಾಕ್ರೋ, ವಿವೇಚನೆಯ ಅನುದಾನ ಮತ್ತು ಆಡಳಿತಾತ್ಮಕ ವెಚ್ಚಗಳನ್ನು ಒಳಗೊಂಡಂತೆ ಜನಸಂಖ್ಯೆಗೆ ತಕ್ಕಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿಗಳ ಆಯವ್ಯಯದ ಮಿತಿಯಂತೆ 5 ಸಾವಿರ ಕೋಟಿ ರೂಪಾಯಿಗಳಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದ್ದು, ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ.
ಮೇ 10, 2025ರಂದು ನಡೆದ ಕೆಕೆಆರ್‌ಡಿಬಿ ಸಭೆಯ ನಿರ್ಣಯಗಳಿಗೆ ಅನುಗುಣವಾಗಿ, ಮಂಡಳಿಯ ನಿಯಮಾವಳಿಗಳಿಗೆ ಬದ್ಧವಾಗಿ ಈ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ. “ರಾಜ್ಯಪಾಲರು ಮಂಡಳಿಯ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿದ್ದಾರೆ. ಈ ಯೋಜನೆಯ ಅನುಷ್ಠಾನದಿಂದ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ದೊಡ್ಡ ಒತ್ತು ದೊರಕಲಿದೆ” ಎಂದು ಡಾ. ಅಜಯ್ ಧರಂಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.