ಯಾದಗಿರಿ:ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಮತ್ತು ಸಂಸದರು ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದು, ಈ ಭಾಗದ ಜನರು ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಲು ತಾವು ಯಾದಗಿರಿಗೆ ಆಗಮಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಆವಿಷ್ಕಾರ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಕುವ ಸಮಾರಂಭದಲ್ಲಿ ಡಿಸಿಎಂ ಶಿವಕುಮಾರ್ ಮಾತನಾಡಿದರು. “ಅಧಿಕಾರ ನಶ್ವರ, ಆದರೆ ಸಾಧನೆಗಳು ಅಜರಾಮರ. ಮತದಾರರೇ ಈಶ್ವರ. ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವಕ್ಕೆ ಮತ್ತು ಸಿದ್ದರಾಮಯ್ಯನವರ ಆಡಳಿತಕ್ಕೆ ಮೆಚ್ಚಿ ಆರು ಸಂಸದರನ್ನು ಆಯ್ಕೆ ಮಾಡಿ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದಾರೆ,” ಎಂದು ಅವರು ತಿಳಿಸಿದರು.
ನಿಮ್ಮ ಬೆಂಬಲದಿಂದ 140 ಶಾಸಕರ ಸಂಖ್ಯಾಬಲದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. ಅಧಿಕಾರಕ್ಕೆ ಬಂದ ಮೊದಲ ದಿನವೇ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ದರ್ಶನಾಪುರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ರಾಧಕೃಷ್ಣ, ಬಿ.ವಿ. ನಾಯಕ್ ಮತ್ತು ಜಿಲ್ಲೆಯ ಶಾಸಕರು ಒಟ್ಟಾಗಿ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ದಿದ್ದಾರೆ ಎಂದು ಡಿಸಿಎಂ ಶ್ಲಾಘಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ₹416 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕವು ಬೆಂಗಳೂರು ನಂತರ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಕಾರ್ಮಿಕ ಸಚಿವರಾಗಿದ್ದಾಗ ಈ ಭಾಗದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಿ ಆರೋಗ್ಯ ಸೇವೆಯಲ್ಲಿ ಐತಿಹಾಸಿಕ ಕೊಡುಗೆ ನೀಡಿದ್ದಾರೆ ಎಂದು ಶಿವಕುಮಾರ್ ಸ್ಮರಿಸಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಂದ ಕಲ್ಯಾಣ ಕರ್ನಾಟಕಕ್ಕೆ 371ಜೆ ಅಡಿಯಲ್ಲಿ ವಿಶೇಷ ಸ್ಥಾನಮಾನ ದೊರೆತಿದೆ. ಇದರ ಫಲವಾಗಿ ಶಿಕ್ಷಣ, ಆರೋಗ್ಯ, ರಸ್ತೆ, ಗ್ರಾಮೀಣಾಭಿವೃದ್ಧಿ, ಉದ್ಯೋಗ ಸೃಷ್ಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಈ ಭಾಗವು ಗಣನೀಯ ಪ್ರಗತಿ ಸಾಧಿಸಿದೆ ಎಂದು ಅವರು ಹೇಳಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳ ಮೂಲಕ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದ ಜನರ ಬದುಕನ್ನು ಸುಧಾರಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಉದ್ಯೋಗ ಖಾತರಿ, ಶೈಕ್ಷಣಿಕ ಹಕ್ಕು, ಆಹಾರ ಭದ್ರತೆ ಕಾಯ್ದೆಗಳಂತಹ ಕ್ರಾಂತಿಕಾರಕ ಕಾನೂನುಗಳನ್ನು ಜಾರಿಗೆ ತರಲಾಗಿತ್ತು. ಇಂದಿರಾ ಗಾಂಧಿಯವರು 50 ವರ್ಷಗಳ ಹಿಂದೆ ಅಂಗನವಾಡಿಗಳನ್ನು ಆರಂಭಿಸಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಚಾಲನೆ ನೀಡಿದ್ದರು ಎಂದು ಡಿಸಿಎಂ ತಿಳಿಸಿದರು.
ಕಾಂಗ್ರೆಸ್ ಸರ್ಕಾರವು ಸರ್ವರಿಗೂ ಸಮಬಾಳು, ಸಮಪಾಲು ತತ್ವದ ಮೇಲೆ ಕಾರ್ಯಕ್ರಮ ರೂಪಿಸಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ನಾಯಕತ್ವದಲ್ಲಿ ಜಾತಿಗಣತಿಯ ಮರುಸಮೀಕ್ಷೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲಾ ವರ್ಗ, ಜಾತಿ, ಧರ್ಮದವರು ಈ ಅವಕಾಶವನ್ನು ಬಳಸಿಕೊಂಡು ಸರಿಯಾದ ಮಾಹಿತಿಯನ್ನು ಒದಗಿಸಬೇಕು ಎಂದು ಶಿವಕುಮಾರ್ ಮನವಿ ಮಾಡಿದರು.
ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಶರಣಪ್ರಕಾಶ್ ಪಾಟೀಲ್ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸಾಧನೆ ಮಾಡುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಶಾಸಕರು, ಸಚಿವರು ಒಟ್ಟಾಗಿ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿದ್ದಾರೆ ಎಂದು ಡಿಸಿಎಂ ಶುಭ ಹಾರೈಸಿದರು.











