ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರ-ಕುತಂತ್ರಗಳ ನಡುವೆಯೂ ಬಿಜೆಪಿ ಜಯಭೇರಿ ಬಾರಿಸಲು ಉತ್ತಮ ಅವಕಾಶವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವಾಗ ಜಿಬಿಎ ಚುನಾವಣೆ ನಡೆದರೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ನ ತಂತ್ರಗಳ ನಡುವೆಯೂ ಐದೂ ಜಿಬಿಎಗಳಲ್ಲಿ ಜಯ ಸಾಧಿಸಲು ಒಳ್ಳೆಯ ಅವಕಾಶವಿದ್ದು, ಅತಿ ಶೀಘ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದರು. ಜೆಡಿಎಸ್ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಚುನಾವಣೆಗೆ ಸಜ್ಜಾಗುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಫೆಬ್ರವರಿ 28 ಮತ್ತು ಮಾರ್ಚ್ 1ರಂದು ಐದು ಜಿಬಿಎಗಳ ಪ್ರತ್ಯೇಕ ಸಭೆಗಳನ್ನು ಕರೆಯಲಾಗುವುದು. ಈ ಸಭೆಗಳಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದು, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಾಗುವುದು. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿ ಮುನ್ನಡೆಯುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಬೆಂಗಳೂರು ಮಹಾನಗರವು ಇದೀಗ ‘ಗಾರ್ಡನ್ ಸಿಟಿ’ಯಿಂದ ‘ಗಾರ್ಬೇಜ್ ಸಿಟಿ’ಯಾಗಿ ಪರಿವರ್ತನೆಯಾಗಿದೆ ಎಂದು ಟೀಕಿಸಿದ ಅವರು, ಉಸ್ತುವಾರಿ ಸಚಿವರು ಅಥವಾ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿದರು. ಬೆಂಗಳೂರು ಭಾರತದಲ್ಲಷ್ಟೇ ಅಲ್ಲ, ಜಗತ್ತಿನಲ್ಲಿ ಹೆಸರುವಾಸಿಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಟನೆಲ್ ರೋಡ್ ಬಗ್ಗೆ ಮಾತನಾಡುತ್ತಾರೆ ಆದರೆ ಒಂದು ಗುಂಡಿ ಮುಚ್ಚಲೂ ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಭ್ರಷ್ಟಾಚಾರ, ಬೆಲೆ ಏರಿಕೆಯಿಂದ ಬೆಂಗಳೂರು ಜನತೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನಡವಳಿಕೆ, ಅಪಾರ್ಟ್‌ಮೆಂಟ್ ವೆಲ್ಫೇರ್ ಅಸೋಸಿಯೇಷನ್‌ನವರ ಜೊತೆ ಮಾತನಾಡಿದ ಧಾಟಿ ಇತ್ಯಾದಿಗಳನ್ನು ಜನರು ಗಮನಿಸುತ್ತಿದ್ದಾರೆ ಎಂದು ಗಮನ ಸೆಳೆದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಬೆಂಗಳೂರಿಗೆ ನೀಡಿದ ಆದ್ಯತೆ, ಅನುದಾನ ಮತ್ತು ಬಸವರಾಜ ಬೊಮ್ಮಾಯಿ ಅವಧಿಯ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿ ಐದೂ ಜಿಬಿಎಗಳಲ್ಲಿ ಅಧಿಕಾರಕ್ಕೆ ಬರಲು ಸಂಕಲ್ಪ ಮಾಡಿದ್ದೇವೆ ಎಂದರು.
ಈ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಜಿಬಿಎ ಚುನಾವಣೆಗೆ ನೇಮಕ ಮಾಡಿದ ಉಸ್ತುವಾರಿ ರಾಮ್ ಮಾಧವ್, ಸಹ-ಉಸ್ತುವಾರಿಗಳಾದ ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಹಿಂದಿನ ಮೇಯರ್‌ಗಳು, ಉಪ ಮೇಯರ್‌ಗಳು, ಕಾರ್ಪೊರೇಟರ್‌ಗಳು ಮತ್ತು ಹಿರಿಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ತಿಳಿಸಿದರು.












