ಬೆಂಗಳೂರು: ಬೆಂಗಳೂರಿನ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಹೀರೆಂಡಹಳ್ಳಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಭಯಾನಕ ಘಟನೆ ನಡೆದಿದೆ.
ಐವತ್ತು ಲೀಟರ್ ಪೆಟ್ರೋಲ್ ಸುರಿದು ಕೃತ್ಯ:
ಸೋಮವಾರ ಮಧ್ಯರಾತ್ರಿಯಲ್ಲಿ ದುಷ್ಕರ್ಮಿಗಳು ಬಿದರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಜಗನ್ನಾಥ್ ಅವರ ಮನೆಯನ್ನು ಗುರಿಯಾಗಿಸಿಕೊಂಡು ಕಿಟಕಿಗಳ ಮೂಲಕ 50 ಲೀಟರ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅದೃಷ್ಟವಶಾತ್ ಕುಟುಂಬ ಪಾರು:
ಘಟನೆಯ ವೇಳೆ ಸದಸ್ಯ ಜಗನ್ನಾಥ್ ಅವರ ಜೊತೆಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿ ಇದ್ದರೂ, ಅವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚಿದ ನಂತರ 10 ಲೀಟರ್ ಪೆಟ್ರೋಲ್‌ನ ಕ್ಯಾನ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪೊಲೀಸರ ಪರಿಶೀಲನೆ:
ಸಂಘಟನೆ ಬಗ್ಗೆ ಮಾಹಿತಿ ಪಡೆದ ಆವಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯ ಹಿಂದಿನ ವೈಮನಸ್ಯದಿಂದ ನಡೆದಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆದಿದೆ.