ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಕಳೆದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಗೈರಾಗಿದ್ದ ನಟ ದರ್ಶನ್‌ಗೆ ನ್ಯಾಯಾಧೀಶರು ಖಡಕ್ ಎಚ್ಚರಿಕೆ ನೀಡಿದ್ದರು. ಮತ್ತೊಮ್ಮೆ ಗೈರಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದ ನ್ಯಾಯಾಧೀಶರು, ಆರೋಪಿಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಆದೇಶಿಸಿದ್ದರು. ಆದರೆ, ಗೈರಾದ ಮರುದಿನವೇ ದರ್ಶನ್ ನಟ ಧನ್ವೀರ್ ಅವರ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ನಿನ್ನೆಯಷ್ಟೇ ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿರುವ ದರ್ಶನ್, ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಮತ್ತು ಎ2 ಆರೋಪಿಯಾಗಿರುವ ದರ್ಶನ್ ಸೇರಿದಂತೆ ಇತರ ಆರೋಪಿಗಳು ಕೂಡ ಕೋರ್ಟ್‌ಗೆ ಹಾಜರಾಗಲಿದ್ದಾರೆ.
ಕಳೆದ ಬಾರಿಯ ಗೈರು ಹಿನ್ನೆಲೆಯಲ್ಲಿ ನ್ಯಾಯಾಲಯದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ದರ್ಶನ್ ಈ ಬಾರಿ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಏನಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.