ಬೆಂಗಳೂರು, ಕಾಂಗ್ರೆಸ್ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರದ ಮುಂಭಾಗದಲ್ಲಿ ಮೌನ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಪಕ್ಷದ ಮುಖಂಡರು, ಮಹಿಳಾ ಕಾರ್ಯಕರ್ತರು ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
ಆದರೆ, ಪ್ರತಿಭಟನೆ ವೇಳೆ ಪೊಲೀಸರು ಭಾಗವಹಿಸಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದರು. ಈ ಕ್ರಮವು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಜನೌಷಧಿ ಕೇಂದ್ರಗಳ ಮುಚ್ಚುವಿಕೆಯಿಂದ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ದೊರೆಯುವ ಔಷಧಿಗಳ ಲಭ್ಯತೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.