ಬೆಂಗಳೂರು: ಖಾಸಗಿ ಟಿವಿ ವಾಹಿನಿ ಸಂದರ್ಶನದಲ್ಲಿ ಸಂವಿಧಾನ ಬದಲಿಸುವುದಾಗಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಇಂದು ಪದ್ಮನಾಭನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗಿಯಾದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದು, ಬಿಜೆಪಿ ನಾಯಕರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಈ ವಿಷಯ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ವಿರುದ್ಧ ವಿವಿಧ ರಾಜಕೀಯ ವಲಯಗಳಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.