ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 4,078 ದಿನಗಳ ಸುದೀರ್ಘ ಆಡಳಿತದ ಮೂಲಕ ಜವಾಹರಲಾಲ್ ನೆಹರೂ ಅವರ ನಂತರ ದೇಶವನ್ನು ಅತಿ ಹೆಚ್ಚು ದಿನ ಮುನ್ನಡೆಸಿದ ಎರಡನೇ ಪ್ರಧಾನಿಯಾಗಿ ದಾಖಲೆ ಬರೆದಿದ್ದಾರೆ. ಈ ಸಾಧನೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಮತ್ತು ದೇಶದ ಜನರ ಪರವಾಗಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, “ನರೇಂದ್ರ ಮೋದಿಜೀ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಅವರು ತಮ್ಮನ್ನು ಪ್ರಧಾನಮಂತ್ರಿಯಾಗಿ ಗುರ್ತಿಸದೆ, ದೇಶ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುರ್ತು ಪರಿಸ್ಥಿತಿ ಹೇರದೆ, ಅನುಕಂಪದ ಆಧಾರದ ಮೇಲೆ ಆಡಳಿತ ನಡೆಸದೆ, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಮುಂದೆಯೂ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ,” ಎಂದು ಹೇಳಿದರು.
ಕಾಂಗ್ರೆಸ್‌ನ ಆರೋಪಕ್ಕೆ ತಿರುಗೇಟು
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, “ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದೆ. ರಾಹುಲ್ ಗಾಂಧಿ ಮತ್ತಿತರ ಕಾಂಗ್ರೆಸ್ ನಾಯಕರು ಇಂತಹ ಸಂಸ್ಥೆಯನ್ನು ಅಪಮಾನಿಸುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಕಾಂಗ್ರೆಸ್‌ನ ಈ ಹೇಳಿಕೆಯಿಂದ ಅವರ ತುರ್ತು ಪರಿಸ್ಥಿತಿಯ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಸಾಬೀತಾಗುತ್ತದೆ,” ಎಂದು ಟೀಕಿಸಿದರು.
“ಚುನಾವಣಾ ಅಕ್ರಮದಿಂದ ಡಿ.ಕೆ. ಸುರೇಶ್ ಸೋತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ, ಅಕ್ರಮವಾದರೆ ಕಾಂಗ್ರೆಸ್ ರಾಜ್ಯದಲ್ಲಿ 136 ಶಾಸಕರ ಬಲದಿಂದ ಅಧಿಕಾರಕ್ಕೆ ಏಕೆ ಬಂತು? ಸಿದ್ದರಾಮಯ್ಯನವರೇ, ಚುನಾವಣಾ ಆಯೋಗ ದುರ್ಬಳಕೆಯಾದರೆ ನೀವು ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ? ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲವೇ? ಇತ್ತೀಚಿನ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಾಗ ಚುನಾವಣಾ ಆಯೋಗದ ದುರ್ಬಳಕೆಯಾಗಿಲ್ಲವೇ?” ಎಂದು ವಿಜಯೇಂದ್ರ ಪ್ರಶ್ನಿಸಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಅವರು, “ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುವ ಬದಲು, ತಮ್ಮ ಆರೋಪಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಂಡಿಸಲಿ. ಇಂತಹ ಸಾಂವಿಧಾನಿಕ ಸಂಸ್ಥೆಯನ್ನು ಪ್ರಶ್ನಿಸುವುದು ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ,” ಎಂದರು.
ಮಹದಾಯಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡುವ ಭರವಸೆ
ಮಹದಾಯಿ ಯೋಜನೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರಾಜಾರೋಷವಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಮಹದಾಯಿ ವಿಷಯದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಜ್ಯ ಬಿಜೆಪಿ ಯಾವಾಗಲೂ ರಾಜ್ಯದ ಜನರೊಂದಿಗೆ ಇರುತ್ತದೆ. ಗೋವಾ ಮುಖ್ಯಮಂತ್ರಿಯ ಹೇಳಿಕೆಯನ್ನು ಗಮನಿಸಿದ್ದೇನೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಯನ್ನೂ ಗಮನಿಸಬೇಕು. ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಡಲು ನಾವು ಎಂದಿಗೂ ಅವಕಾಶ ನೀಡುವುದಿಲ್ಲ,” ಎಂದು ಭರವಸೆ ನೀಡಿದರು.