ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದಿನಾಂಕ: 08-04-2025 ಮತ್ತು 09-04-2025 ರಂದು ಪರೀಕ್ಷೆಗಳು ನಡೆಸಲು ತಾತ್ಕಾಲಿಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ವಿಧಾನಸಭೆಯಲ್ಲಿ ಘೋಷಣೆ ಮಾಡಿದರು.
ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕ: ಶರಣಗೌಡ ಕಂದಕೂರ್, ಗುರುಮಿಠಕಲ್ ಕ್ಷೇತ್ರದ ಶಾಸಕರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಸಚಿವರು, ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ನೇಮಕಾತಿ ಪ್ರಕ್ರಿಯೆ ಪೂರ್ತಿಯಾಗುವವರೆಗೆ ಗುತ್ತಿಗೆ ಆಧಾರದಲ್ಲಿ ಪಶು ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ, 360 ಪಶು ವೈದ್ಯಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕಲ್ಯಾಣ ಕರ್ನಾಟಕ ಯೋಜನೆ ಅಡಿಯಲ್ಲಿ ವಿಶೇಷ ನೇಮಕಾತಿ: ಅನುಚ್ಛೇದ-371(ಜೆ) ಅಡಿಯಲ್ಲಿ, 32 ಪಶು ವೈದ್ಯಕೀಯ ಪರೀಕ್ಷಕರ ಹುದ್ದೆಗಳಿಗೆ ವಿಶೇಷ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದ್ದು, 27 ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ನೇಮಕಾತಿ ಆದೇಶಗಳನ್ನು ನೀಡಲಾಗಿದೆ. ಉಳಿದ 5 ಅಭ್ಯರ್ಥಿಗಳ ಸಿಂಧುತ್ವ ಪ್ರಮಾಣಪತ್ರಗಳ ವರದಿ ಬಂದ ನಂತರ, ಅವರ ನೇಮಕಾತಿ ಆದೇಶಗಳನ್ನು ನೀಡಲಾಗುವುದು.
ಡಿ ದರ್ಜೆ ನೌಕರರ ನೇಮಕ: 700 ಡಿ ದರ್ಜೆ ಹುದ್ದೆಗಳ ನೇಮಕ ಪ್ರಸ್ತಾವನೆಯು ಪರಿಶೀಲನೆಯಲ್ಲಿದ್ದು, ಯಾದಗಿರಿ ಜಿಲ್ಲೆಯಲ್ಲಿ 60 ಡಿ ದರ್ಜೆ ಹುದ್ದೆಗಳನ್ನು ಈಗಾಗಲೇ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಚಿವರ ಸ್ಪಷ್ಟನೆ: ಸಚಿವರು, ಈ ಕ್ರಮಗಳು ಪಶುಸಂಗೋಪನೆ ಇಲಾಖೆಯ ಕಾರ್ಯಕ್ಷಮತೆಯನ್ನು ಸುಧಾರಿಸಲು ಮತ್ತು ಗ್ರಾಮೀಣ ಭಾಗದ ಪಶುಗಳ ಸೇವೆಗಳನ್ನು ಉತ್ತಮಗೊಳಿಸಲು ಸಹಕಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.