ಬೆಂಗಳೂರು:
ಬಳ್ಳಾರಿಯ ತಾರಾನಾಥ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶಾತಿ ಸೀಟುಗಳ ಸಂಖ್ಯೆಯನ್ನು 60ಕ್ಕೆ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನ ಪರಿಷತ್‌ನ ಅಧಿವೇಶನದಲ್ಲಿ ಸದಸ್ಯ ವೈ.ಎಂ. ಸತೀಶ್ ಅವರು ನಿಯಮ 72ರ ಅಡಿಯಲ್ಲಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಕಾಲೇಜಿನಲ್ಲಿ ಬೋಧಕ ಹುದ್ದೆಗಳ ಖಾಲಿಯಿರುವಿಕೆ ಮತ್ತು ಇತರ ಕೊರತೆಗಳನ್ನು ಪರಿಶೀಲಿಸಿದ ಭಾರತೀಯ ವೈದ್ಯಕೀಯ ರಾಷ್ಟ್ರೀಯ ಆಯೋಗವು ಸೀಟುಗಳ ಸಂಖ್ಯೆಯನ್ನು ಕಡಿಮೆ ಮಾಡುವಂತೆ ಶಿಫಾರಸು ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಸರ್ಕಾರವು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಜೊತೆಗೆ, ಕಾಲೇಜಿನ ಕೊರತೆಗಳನ್ನು ಶೀಘ್ರವಾಗಿ ಸರಿಪಡಿಸುವ ಬಗ್ಗೆ ಅಫಿಡವಿಟ್ ಸಲ್ಲಿಸಲಾಗಿತ್ತು. ಈ ಮನವಿಯನ್ನು ಆಯೋಗ ಮಾನ್ಯ ಮಾಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ 60 ಸೀಟುಗಳನ್ನು ಯಥಾವತ್ತಾಗಿ ಮುಂದುವರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.