ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿ ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಟ್ಯೂಷನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದ 13 ವರ್ಷದ ಬಾಲಕನನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟು, ಕೊನೆಗೆ ಕತ್ತು ಕೊಯ್ದು ಕೊಲೆ ಮಾಡಿ, ಮೃತದೇಹಕ್ಕೆ ಪೆಟ್ರೋಲ್ ಸುರಿದು ಸುಟ್ಟಿರುವ ದಾರುಣ ಘಟನೆ ನಡೆದಿದೆ.
ಈ ಘಟನೆಯು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ದುರ್ಬಲ ಸ್ಥಿತಿಯನ್ನು ಒಡ್ಡಿಹಾಕಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತುಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಘಟನೆ ಬೇಕೇ?” ಎಂದು ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ. “ಗೃಹ ಇಲಾಖೆ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಜನರ ಬಲಿಯಾಗಬೇಕು? ಇನ್ನೆಂತಹ ದುರ್ಘಟನೆಗಳು ನಡೆಯಬೇಕು?” ಎಂದು ಕಿಡಿಕಾರಿದ್ದಾರೆ.
ಪೊಲೀಸರು ಈ ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಶ್ರಮಿಸುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.