ಬೆಂಗಳೂರು,: ರಾಜಧಾನಿ ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣ ನಡೆದಿದೆ. ಆಫ್ರಿಕಾದ ನೈಜೀರಿಯಾದ ಕ್ರಾಸ್ ರಿವರ್ ರಾಜ್ಯದ ಲೋವಿತ್ (Loveth) ಎಂಬ ಮಹಿಳೆಯನ್ನು ಹಂತಕರು ಕೊಲೆಗೈದು, ಚಿಕ್ಕಜಾಲ ವ್ಯಾಪ್ತಿಯ ಬೆಟ್ಟಹಲಸೂರು ಮುಖ್ಯರಸ್ತೆ ಬಳಿ ಆಕೆಯ ಮೃತದೇಹವನ್ನು ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ಮಹಿಳೆಯನ್ನು ಬೇರೆಡೆ ಕೊಲೆ ಮಾಡಿ, ನಂತರ ಚಿಕ್ಕಜಾಲ ವ್ಯಾಪ್ತಿಯಲ್ಲಿ ಮೃತದೇಹವನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪೊಲೀಸರು ಈಗ ಮೃತ ಮಹಿಳೆಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ಆರಂಭಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.