ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿ, ಕರ್ನಾಟಕ ಬಿಜೆಪಿ ಘಟಕವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೂನ್ 17ರಂದು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿತು. ಈ ದುರಂತದಲ್ಲಿ 11 ಅಮಾಯಕರ ಸಾವಿಗೆ ಕಾರಣವಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಕ್ಷಣ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒಕ್ಕೊರಲಿನಿಂದ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಾಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಕಾಂಗ್ರೆಸ್ ಸರ್ಕಾರವು ಆರ್‌ಸಿಬಿ ಗೆಲುವಿನ ಸಂಭ್ರಮವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಆತುರದಿಂದ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿತು ಎಂದು ಬಿಜೆಪಿ ನಾಯಕರು ಆರೋಪಿಸಿದರು. “ಸರ್ಕಾರವು ಜನರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿತು, ಆದರೆ ಜನಸಂದಣಿಯನ್ನು ನಿಯಂತ್ರಿಸಲು ಸರಿಯಾದ ಭದ್ರತಾ ವ್ಯವಸ್ಥೆಯನ್ನು ಮಾಡಲಿಲ್ಲ. ಇದರ ಪರಿಣಾಮವೇ 11 ಜನರ ದಾರುಣ ಸಾವು,” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ತಮ್ಮ ಫಲಕಗಳಲ್ಲಿ, “ಕಾಂಗ್ರೆಸ್ ನಾಯಕರ ಪ್ರಚಾರದ ತವಕಕ್ಕೆ ಅಮಾಯಕರ ಸಾವು,” “ಲಕ್ಷಾಂತರ ಜನ ಸೇರುವೆಂದು ಗೊತ್ತಿದ್ದರೂ ಒಂದೇ ದಿನದಲ್ಲಿ ಕಾರ್ಯಕ್ರಮ ಏಕೆ ಆಯೋಜಿಸಲಾಯಿತು?” ಮತ್ತು “ಸರ್ಕಾರದ ತಪ್ಪಿಗೆ ಪೊಲೀಸರನ್ನು ಶಿಕ್ಷಿಸುವುದು ಸರಿಯೇ?” ಎಂಬ ಘೋಷಣೆಗಳನ್ನು ಬರೆದಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಯವರ ನಿವಾಸದ ಕಡೆಗೆ ಮೆರವಣಿಗೆಗೆ ತೆರಳಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, “ಕಾಲ್ತುಳಿತ ದುರಂತದ 13 ದಿನಗಳ ನಂತರವೂ ಕಾಂಗ್ರೆಸ್ ಸರ್ಕಾರ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ. ಬದಲಿಗೆ ಪೊಲೀಸ್ ಅಧಿಕಾರಿಗಳ ಮೇಲೆ ದೂಷಣೆ ಹೊರಿಸುತ್ತಿದೆ. ಕರ್ನಾಟಕ ಹೈಕೋರ್ಟ್ ಕೂಡ ರಾಜಕೀಯ ನಾಯಕತ್ವವು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದೆ,” ಎಂದರು.
ಕಾಂಗ್ರೆಸ್ ಸರ್ಕಾರವು ಈ ದುರಂತವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ, ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿತು. “ಈ ದುರಂತಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಜನರ ಆಕ್ರೋಶವು ಸರ್ಕಾರಕ್ಕೆ ಭಾರೀ ಬೆಲೆ ತೆರಿಸುವುದು,” ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದರು.