ಬೆಂಗಳೂರು ದಕ್ಷಿಣ: ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಪರಿಣಾಮ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದು, ಈ ಕುರಿತು ಪ್ರಧಾನಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಣಿಜ್ಯ ಸಿಲಿಂಡರ್ ದರ ಏರಿಕೆ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿ, “ಅಚ್ಛೇ ದಿನದ ಭರವಸೆ ನೀಡಿದ ಪ್ರಧಾನಮಂತ್ರಿಗಳು ಈಗ ಜನರ ಸಂಕಷ್ಟಕ್ಕೆ ಏನು ಪರಿಹಾರ ಕೊಡುತ್ತಾರೆ ಎಂಬುದನ್ನು ತಿಳಿಸಬೇಕು” ಎಂದು ಹೇಳಿದರು.
ಪಂಚರಾಜ್ಯ ಚುನಾವಣೆಗಳ ಬಳಿಕ ದರ ಏರಿಕೆ ಮಾಡಿರುವ ಬಗ್ಗೆ ಪ್ರಶ್ನಿಸಿದಾಗ, “ಇದು ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.
ಸಿಲಿಂಡರ್ ಕೊರತೆಯಿಂದ ಹೊಟೇಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಮಾತನಾಡಿದ ಅವರು, “ಸಿಲಿಂಡರ್ ಸರಬರಾಜಿನಲ್ಲಿ ಸಮಸ್ಯೆ ಇದೆ. ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರು ಮತ್ತು ಜನಪ್ರತಿನಿಧಿಗಳು ಇದಕ್ಕೆ ಉತ್ತರಿಸಬೇಕು” ಎಂದು ಒತ್ತಾಯಿಸಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರು ಭೂಮಿ ನೀಡಲು ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ, “ಈ ವಿಚಾರದಲ್ಲಿ ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕು” ಎಂದು ಹೇಳಿದರು.
ನಾಯಕತ್ವ ಬದಲಾವಣೆ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಕೇಳಿದಾಗ, “ಆ ವಿಷಯದಲ್ಲಿ ನನಗೆ ಮಾಹಿತಿ ಇಲ್ಲ. ಅವರು ಪಕ್ಷದ ಅಧ್ಯಕ್ಷರು; ಅವರ ಮಾತನ್ನು ಪಕ್ಷ ಅನುಸರಿಸುತ್ತದೆ” ಎಂದರು.
ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಲಾಗುತ್ತದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಜನರ ಆಶೀರ್ವಾದದಂತೆ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮ ಜಿಲ್ಲೆ ಅಭಿವೃದ್ಧಿಯೇ ನಮ್ಮ ಆದ್ಯತೆ” ಎಂದು ಹೇಳಿದರು.
ರಾಜಕೀಯ ಗೊಂದಲಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ಗೊಂದಲ ಇಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ತೀರ್ಮಾನದಂತೆ ನಡೆಯಲಿದೆ” ಎಂದು ಸ್ಪಷ್ಟಪಡಿಸಿದರು.











