ಮಂಡ್ಯ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಲಭೆ ಸಂಭವಿಸಿದ ತಕ್ಷಣ ಪೊಲೀಸರು 21 ಜನರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ ಎಂದು ಹೇಳಿದರು. “ಗಲಭೆಯ ತನಿಖೆಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಐ.ಜಿ. ಸೇರಿದಂತೆ ಎಂಟು ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಶೀಘ್ರದಲ್ಲೇ ಸಂಪೂರ್ಣ ವರದಿಯನ್ನು ತಯಾರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು,” ಎಂದು ಸಚಿವರು ತಿಳಿಸಿದರು.

ಗಲಭೆಯ ಹಿಂದೆ ರಾಜಕೀಯ ಉದ್ದೇಶವಿದೆಯೇ ಎಂಬುದನ್ನು ಸಹ ತನಿಖೆಯ ಮೂಲಕ ಪರಿಶೀಲಿಸಲಾಗುವುದು ಎಂದ ಅವರು, “ಯಾರನ್ನೂ ಓಲೈಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ಸ್ಪಷ್ಟಪಡಿಸಿದರು.
ಮಂಡ್ಯ ಜಿಲ್ಲೆಯು ಸ್ವಾತಂತ್ರ್ಯ ಹೋರಾಟ ಮತ್ತು ಕಾವೇರಿ ಹೋರಾಟಕ್ಕೆ ಹೆಸರುವಾಸಿಯಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಸರ್ಕಾರ ಬೆಂಬಲಿಸುವುದಿಲ್ಲ ಎಂದ ಸಚಿವರು, ಧಾರ್ಮಿಕ ಸಂಘಟನೆಗಳು ಯಾವುದೇ ರಾಜಕೀಯ ಪ್ರಚೋದನೆಗೆ ಒಳಗಾಗಬಾರದು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ವಿಕೆ ಉಪಸ್ಥಿತರಿದ್ದರು.