ಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ವಿಜಯಪುರ, ಹುಬ್ಬಳ್ಳಿ – ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಮೂಲಸೌಲಭ್ಯಗಳನ್ನು ಸಮರ್ಪವಾಗಿ ಕೈಗೊಳ್ಳಲಾಗಿದೆ. ಸ್ವಚ್ಚ ಭಾರತ್ ಮಿಷನ್ (ನ)2.0 ಯೋಜನೆಯು 2021 ರಿಂದ 2026ನೇ ಸಾಲಿನ ವರೆಗೆ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ಮಹಾನಗರ ಪಾಲಿಕೆಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಪಾರಂಪರಿಕ ತಾಜ್ಯ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಐ.ಇ.ಸಿ ಚಟುವಟಿಕೆಗಳು ಮತ್ತು ಸಾಮರ್ಥ್ಯಾಭಿವೃದ್ಧಿ ಅಡಿ ವಿವಿಧ ಹಿತಾಸಕ್ತಿದಾರರಿಗೆ ತರಬೇತಿ, ಕಾರ್ಯಾಗಾರಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ.
ಎಸ್.ಎಫ್.ಸಿ ಯೋಜನೆಯಡಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಎಸ್.ಎಫ್.ಸಿ ಕುಡಿಯುವ ನೀರು ಯೋಜನೆಗಳಡಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರವು ಅನುದಾನವನ್ನು ಹಂಚಿಕೆ ಮಾಡಿ ಬಿಡುಗಡೆಗೊಳಿಸಿರುತ್ತದೆ.