ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಕೋರಿಕೆಯನ್ನಿಟ್ಟು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮನವಿ ಮಾಡಿದ್ದಾರೆ.
ಜನಜಾನುವಾರುಗಳಿಗೆ ನೀರಿನ ಕೊರತೆ
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಕಳೆದ ವರ್ಷವೂ ಇದೇ ರೀತಿಯ ಪರಿಸ್ಥಿತಿ ಉಂಟಾಗಿತ್ತು, ಆಗ ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿ ಅಗತ್ಯ ನೀರು ಹರಿಸಿತ್ತು.
ಈ ಬಾರಿ ಸಹ ಸಹಾಯ ಮಾಡುವಂತೆ ಮನವಿ
ಕಳೆದ ವರ್ಷ ನೀಡಿದ ಸಹಾಯವನ್ನು ನೆನೆಪಿಸಿಕೊಳ್ಳುತ್ತಾ, ಈ ಬಾರಿಯೂ ಅದೇ ರೀತಿಯಾಗಿ ಸ್ಪಂದಿಸಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ನೀರಿನ ಕೊರತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೃಷ್ಣಾ ಮತ್ತು ಭೀಮಾ ನದಿಗಳಿಗೆ ತಕ್ಷಣವೇ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರದಲ್ಲಿ ಒತ್ತಾಯಿಸಲಾಗಿದೆ.