ಐಸಿಡಿಎಸ್ ಸುವರ್ಣ ಮಹೋತ್ಸವಕ್ಕೆ ರಾಜ್ಯಮಟ್ಟದ ಪೂರ್ವಭಾವಿ ಸಭೆ; 40 ಸಾವಿರ ಮಹಿಳೆಯರ ಭಾಗವಹಿಸುವ ನಿರೀಕ್ಷೆ
ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಮುಖ್ಯ ಗುರಿ. ಮುಂದಿನ ದಿನಗಳಲ್ಲಿ ಇಲಾಖೆಯನ್ನು ರಾಜ್ಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ತರುವುದೇ ನನ್ನ ಕನಸು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ ೧೯ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ ಮತ್ತು ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮಗಳ ರಾಜ್ಯಮಟ್ಟದ ಪೂರ್ವಭಾವಿ ಸಭೆಯನ್ನು ಬುಧವಾರ ಡಾ. ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ ನಡೆಸಿದ ಸಚಿವರು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಅವರು, ಐಸಿಡಿಎಸ್ ಕಾರ್ಯಕ್ರಮಗಳ ಬಗ್ಗೆ ಸಲಹೆ ಮತ್ತು ಸಹಕಾರ ಕೋರಿದ್ದು, ಮುಖ್ಯ ಕಾರ್ಯಕ್ರಮಕ್ಕೆ ಸುಮಾರು ೪೦ ಸಾವಿರಕ್ಕೂ ಹೆಚ್ಚು ಮಹಿಳೆಯರು ಆಗಮಿಸುವ ನಿರೀಕ್ಷೆಯಿದೆ. ಯಾವುದೇ ಲೋಪವೂ ಆಗದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.
ಗೃಹಲಕ್ಷ್ಮಿ ಬ್ಯಾಂಕ್ ಜನಮನ್ನಣೆ ಗಳಿಸಲಿ
ವಿಶ್ವದಲ್ಲೇ ಅತಿದೊಡ್ಡ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಇದರ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ (ಬ್ಯಾಂಕ್) ಆರಂಭಿಸಲಾಗುತ್ತಿದೆ. ಈಗಾಗಲೇ ೨,೦೦೦ ಫಲಾನುಭವಿಗಳ ಹಣವನ್ನು ಸಂಗ್ರಹಿಸಲಾಗಿದ್ದು, ಇದು ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೇ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೆ ಸೊಸೈಟಿಯನ್ನು ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸೊಸೈಟಿ ಮೂಲಕ ಫಲಾನುಭವಿಗಳಿಗೆ ₹೩ ಲಕ್ಷದವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಯಾವುದೇ ಬಾಹ್ಯ ಹಣವನ್ನು ಪಡೆಯದೆ ಫಲಾನುಭವಿಗಳಿಂದಲೇ ಫೋನ್‌ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ತೋರಿದ ಶ್ರಮದಂತೆಯೇ ಬ್ಯಾಂಕ್‌ಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಕಾ ಪಡೆ: ಮಹಿಳಾ ಸುರಕ್ಷತೆಗೆ ಹೊಸ ಆಯಾಮ
ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ಒದಗಿಸಲು ರಾಜ್ಯಾದ್ಯಂತ ‘ಅಕ್ಕಾ ಪಡೆ’ ಆರಂಭಿಸಲಾಗುತ್ತಿದೆ. ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಕ್ಕಾ ಪಡೆಯನ್ನು ಮನೆಮಾತಾಗಿಸಬೇಕು ಎಂದು ಸಚಿವರು ಕರೆ ನೀಡಿದರು.
ಹೋಮ್ ಗಾರ್ಡ್ಸ್ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳು ಅಕ್ಕಾ ಪಡೆಯಲ್ಲಿ ಕಾರ್ಯನಿರ್ವಹಿಸಲಿದ್ದು, ಬೆಳಗ್ಗೆ ೮ರಿಂದ ರಾತ್ರಿ ೮ರವರೆಗೆ ಶಾಲಾ-ಕಾಲೇಜು, ಪಾರ್ಕ್, ಶಾಪಿಂಗ್ ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದಾರೆ. ಡೀಪ್ ಫೇಕ್ ಹಾವಳಿ ತಡೆಗೆ ಹೆಣ್ಣುಮಕ್ಕಳು ಮತ್ತು ಹಿರಿಯ ಮಹಿಳೆಯರನ್ನು ರಕ್ಷಿಸಲು ಕೆಲಸ ಮಾಡಲಿದೆ. ಮೂರು ತಿಂಗಳಲ್ಲಿ ಮನೆಮನೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುವುದು ಎಂದರು.
ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ದಾಖಲಾತಿ ಹೆಚ್ಚಳ
ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭವಾಗುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಹೆಚ್ಚಿನ ವಿದ್ಯಾರ್ಥಿಗಳ ದಾಖಲಾತಿ ಕಲ್ಪಿಸಬೇಕು. ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಅಗತ್ಯ ಎಂದು ಸಚಿವರು ಒತ್ತಾಯಿಸಿದರು.
ಇಂದಿರಾ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಆಯೋಜಿತ ಕಾರ್ಯಕ್ರಮಗಳ ಯಶಸ್ಸಿಗೆ ಎಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದರು.
೮ ಜಿಲ್ಲೆಗಳಿಂದ ಹೆಚ್ಚಿನ ಭಾಗವಹಿಸುವಿಕೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಂದ ಹೆಚ್ಚಿನ ಮಹಿಳೆಯರು ಭಾಗವಹಿಸಲಿದ್ದು, ಈ ಜಿಲ್ಲೆಗಳ ಉಪನಿರ್ದೇಶಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಲಾಯಿತು.
ಸಭೆಯಲ್ಲಿ ೩೧ ಜಿಲ್ಲೆಗಳ ಉಪನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು, ೨೦೦ಕ್ಕೂ ಹೆಚ್ಚು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮತ್ತು ರಾಜ್ಯದ ಎಲ್ಲ ಮೇಲ್ವಿಚಾರಕರು ಭಾಗವಹಿಸಿದ್ದರು.
ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಇಲಾಖೆ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ನಿರ್ದೇಶಕ ಮಹೇಶ್ ಬಾಬು, ಉಪ ಕಾರ್ಯದರ್ಶಿ ಮುರಳೀಧರ್ ಎಸ್. ತಳ್ಳೀಕೆರಿ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ವಿವಿಧ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು.












