ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳ ಸಮಸ್ಯೆಗೆ ಸ್ಥಿರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ಶಾಸಕರು ಈ ವಿಷಯವನ್ನು ಗಮನಕ್ಕೆ ತಂದಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ‘ರಸ್ತೆ ಗುಂಡಿ ಗಮನ’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಾಂಶದ ಮೂಲಕ ನಾಗರಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಅವರು ಹೇಳಿದರು.
ಸೋಮವಾರ ಮಧ್ಯರಾತ್ರಿ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, “ಇತ್ತೀಚೆಗೆ ಬಾಗಲೂರು ರಸ্তೆಯ ಸ್ಥಿತಿಯನ್ನು ನೋಡಿ ಬೇಸರವಾಗಿತ್ತು. ನಗರದಾದ್ಯಂತ 5,000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ 4,400 ಗುಂಡಿಗಳನ್ನು ಆದ್ಯತೆಯ ಮೇಲೆ ಮುಚ್ಚಲು ಸೂಚನೆ ನೀಡಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ 2,200 ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ,” ಎಂದು ಮಾಹಿತಿ ನೀಡಿದರು.
ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸವೂ ತೀವ್ರಗೊಂಡಿದ್ದು, ಸ್ಕೈವಾಕ್‌ಗಳನ್ನು ಸ್ವಚ್ಛಗೊಳಿಸಲಾಗಿದೆ. ರಸ್ತೆ ಗುಂಡಿಗಳನ್ನು ಕೇವಲ ಮುಚ್ಚುವುದಷ್ಟೇ ಅಲ್ಲ, ಗುಣಮಟ್ಟದ ಕಾಮಗಾರಿಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಮತ್ತು ಇಕೋಫಿಕ್ಸ್ ಸೇರಿದಂತೆ ಮೂರು ವಿಧಾನಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಶಿವಕುಮಾರ್ ವಿವರಿಸಿದರು.
ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಪ್ರಶ್ನಿಸಿದಾಗ, “ಭಾರೀ ವಾಹನಗಳ ಓಡಾಟ, ಮಳೆಗಾಲ ಮತ್ತು ಇತರ ಸಮಸ್ಯೆಗಳಿಂದಾಗಿ ರಸ್ತೆಗಳು ಹಾಳಾಗುತ್ತವೆ. ಆದ್ದರಿಂದ, ಹಂತ-ಹಂತವಾಗಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಇವು 30 ವರ್ಷಗಳ ಕಾಲ ಬಾಳಿಕೆ ಬರುವಂತಿರುತ್ತವೆ,” ಎಂದು ಅವರು ತಿಳಿಸಿದರು.
ರಸ್ತೆ ಗುಂಡಿಗಳಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ಮಹಿಳೆಯರು ಮತ್ತು ಮಕ್ಕಳನ್ನು ಕರೆದೊಯ್ಯುವಾಗ ಗುಂಡಿಗಳಿಂದ ತೊಂದರೆಯಾಗುತ್ತಿರುವುದನ್ನು ಗಮನಿಸಿದ್ದೇನೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ರಸ್ತೆ ಗುಂಡಿಗಳ ಮೇಲ್ವಿಚಾರಣೆಗಾಗಿ ವಿಶೇಷ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ,” ಎಂದು ಹೇಳಿದರು.
ಪೊಲೀಸರಿಗೂ ತಮ್ಮ ವ್ಯಾಪ್ತಿಯಲ್ಲಿ ಗುಂಡಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಲು ಸೂಚಿಸಲಾಗಿದ್ದು, ಈ ಕ್ರಮಗಳಿಂದ ಬೆಂಗಳೂರು ನಗರದ ರಸ್ತೆಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿದೆ.