ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್-19 ಭೀತಿ ಎದುರಾಗುತ್ತಿದೆ. ಮೇ ತಿಂಗಳಲ್ಲಿ ರಾಜ್ಯದಾದ್ಯಂತ 33 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದ ಜನತೆ ಹಾಗೂ ಆರೋಗ್ಯ ಇಲಾಖೆ ಮಧ್ಯೆ ಮತ್ತೆ ಆತಂಕ ಮೂಡಿದೆ.
ಈ ತಿಂಗಳಿನಲ್ಲಿ ನೊಂದಾವಣೆಯಾದ ಪ್ರಕರಣಗಳಲ್ಲಿ 16 ಸಕ್ರಿಯವಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ಚಿಂತೆಯ ವಿಷಯವಾಗಿದೆ.
ಇದರಲ್ಲಿ ಅತ್ಯಂತ ಗಮನ ಸೆಳೆದಿರುವುದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂಬ ಮಾಹಿತಿ. ಮಗುವಿಗೆ ತೀವ್ರ ಶ್ವಾಸಕೋಶ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಣಿ ವಿಲಾಸ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಗೆ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದರೊಂದಿಗೆ ಹೊಸದಾಗಿ ರೂಪುಗೊಳ್ಳುತ್ತಿರುವ JN.1 ತಳಿ ಬಗ್ಗೆ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ತಳಿ ಹೆಚ್ಚು ಹರಡುವ ಶಕ್ತಿ ಹೊಂದಿರುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಅಗತ್ಯವಾಗಿದೆ.
ಆರೋಗ್ಯ ಇಲಾಖೆ ಜನತೆಗೆ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧಾರಣೆ ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿ ಹೇಗೆ ಬೆಳೆಯುತ್ತದೆ ಎಂಬುದರ ಮೇಲೆ ನಿಗಾ ಇರಿಸಲಾಗಿದೆ.