ಬೆಂಗಳೂರು: ಕಾರ್ಮಿಕ ಇಲಾಖೆಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಶಾಲೆಗಳನ್ನು ಸ್ಥಾಪಿಸಬೇಕೆಂದು ಶಾಸಕರಿಂದ ಬೇಡಿಕೆ ಬಂದಿದ್ದು, ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಯು.ಬಿ. ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿತವಾಗಿರುವಂತೆ ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು. ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ. ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವರು ವಿವರಿಸಿದರು.
ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕಾಗಿ ಹಂತಹಂತವಾಗಿ ಈ ಶಾಲೆಗಳನ್ನು ರಾಜ್ಯಾದ್ಯಂತ ಸ್ಥಾಪಿಸಲಾಗುವುದು. ಹಿರೇಕೆರೂರು ಗ್ರಾಮಸ್ಥರು ಶಾಲೆ ನಿರ್ಮಾಣಕ್ಕಾಗಿ 10 ಎಕರೆ ಜಮೀನು ಒದಗಿಸಲು ಮುಂದಾಗಿದ್ದಾರೆ. ನಿಟ್ಟೂರಿನಲ್ಲಿ ಶಾಲೆ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಯು.ಬಿ. ಬಣಕಾರ್ ಮನವಿ ಮಾಡಿದರು.
ಬಹುತೇಕ ಶಾಸಕರಿಂದ ಶ್ರಮಿಕ ವಸತಿ ಶಾಲೆಗಳಿಗೆ ಬೇಡಿಕೆಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ಶಾಲೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.