ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಶಾಸಕ ಜಿ.ಟಿ. ದೇವೇಗೌಡ ಅವರನ್ನು ತೆಗೆದುಹಾಕಲಾಗಿದೆ. ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತಂದಿರುವ ಜೆಡಿಎಸ್ ಪರಮೋಚ್ಚ ನಾಯಕ ಹೆಚ್.ಡಿ. ದೇವೇಗೌಡ ಅವರು, ಹಿರಿಯ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ವಹಿಸಿ ಆದೇಶಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋರ್ ಕಮಿಟಿಯ ನೂತನ ಅಧ್ಯಕ್ಷರಾಗಿ ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಶಿಸ್ತುಪಾಲನಾ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಈ ಬದಲಾವಣೆಗಳು ಪಕ್ಷದ ಒಳಗೆ ಹೊಸ ಚೈತನ್ಯ ತರಲು ಮತ್ತು ಹಿರಿಯ ನಾಯಕರನ್ನು ಸಕ್ರಿಯಗೊಳಿಸಲು ಉದ್ದೇಶಿಸಿವೆ ಎಂದು ತಿಳಿದುಬಂದಿದೆ.











