ಬೆಂಗಳೂರು, ಜುಲೈ 01, 2025: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರದ್ದುಗೊಳಿಸಲಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಮಹತ್ವದ ಆದೇಶ ನೀಡಿದ್ದು, ಎಸ್‌ಐಟಿಯಿಂದ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಸೂಚಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಲಿಂಬಾವಳಿ ಮತ್ತಿತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ಇನ್ಮುಂದೆ ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ಮುಂದುವರಿಸದಂತೆ ಆದೇಶಿಸಿದೆ.
ರಾಜ್ಯ ಸರ್ಕಾರವು ಈ ಹಿಂದೆ ವಾಲ್ಮೀಕಿ ನಿಗಮದ ಹಗರಣದ ತನಿಖೆಗಾಗಿ ಎಸ್‌ಐಟಿ ರಚಿಸಿತ್ತು. ಆದರೆ, ಸಿಬಿಐ ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿತ್ತು. ಈಗ ಹೈಕೋರ್ಟ್‌ನ ಆದೇಶದಂತೆ ತನಿಖೆಯ ಸಂಪೂರ್ಣ ಜವಾಬ್ದಾರಿಯನ್ನು ಸಿಬಿಐ ತೆಗೆದುಕೊಳ್ಳಲಿದೆ.
ಈ ಆದೇಶದಿಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಗೆ ಹೊಸ ದಿಕ್ಕು ದೊರಕಿದ್ದು, ಸಿಬಿಐ ತನಿಖೆಯಿಂದ ಈ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿದೆ ಎಂಬ ನಿರೀಕ್ಷೆಯಿದೆ.