ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು
ಅವರು ಇಂದು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು
ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟು ಬದ್ಧವಾಗಿದ್ದು, ಕನ್ನಡಿಗರು ಭಾಷಾಭಿಮಾನವನ್ನು ಬೆಳೆಸಿಕೊಳ್ಳುವ ಮೂಲಕ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಬೇಕೆಂದರು.
‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ವಾಣಿಯಂತೆ ಕನ್ನಡಿಗರಾದ ನಾವು ಕನ್ನಡವನ್ನು ಹೆಚ್ಚೆಚ್ಚು ಬಳಸಿ , ಬೆಳೆಸಿ ಬೆಳಗಬೇಕಾಗಿದೆ. ಇತರ ಭಾಷಿಕರ ಜೊತೆಗೆ ಕನ್ನಡದಲ್ಲಿಯೇ ಸಂವಹನ ನಡೆಸುವ ಮೂಲಕ ಕನ್ನಡ ಕಲಿಯಬೇಕಾದ ಅನಿವಾರ್ಯತೆ ಅವರಲ್ಲಿ
ಸೃಷ್ಠಿಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ದೇಶದ ಯಾವುದೇ ರಾಜ್ಯದಲ್ಲಿ ಇರದ ನಾಡಗೀತೆ, ನಾಡಧ್ವಜ ನಮ್ಮ ರಾಜ್ಯದಲ್ಲಿ ಮಾತ್ರವಿದೆ. ನಮ್ಮ ಭಾಷೆಯನ್ನು ಮಾತೃಭಾಷೆ ಎನ್ನುತ್ತೇವೆ. ನಮ್ಮ ನಾಡಿನ ತಾಯಿ ಭುವನೇಶ್ವರಿಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸುವ ಮೂಲಕ ಕನ್ನಡಕ್ಕೆ ಹಾಗೂ ಕನ್ನಡ ತಾಯಿಗೆ ಗೌರವ ಸಲ್ಲಿಸಿದಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್.ಎಸ್ ತಂಗಡಗಿ ಮಾತನಾಡಿ, ಕನ್ನಡ ನಾಡಿನ ಅಸ್ಮಿತೆಯಾದ ತಾಯಿ ಭುನನೇಶ್ವರಿ ಪ್ರತಿಮೆ ಉದ್ಘಾಟನೆಯಾದದ್ದು ಒಂದು ಐತಿಹಾಸಿಕ ಕ್ಷಣ. ನಮ್ಮ ಸರ್ಕಾರ ಎಂದೆಂದಿಗೂ ಕನ್ನಡಿಗರ ಪರವಾಗಿದೆ. ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿಯ ಪ್ರಶ್ನೆಯಿಲ್ಲ. ಕರ್ನಾಟಕದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವರ್ಷವಿಡೀ ಕನ್ನಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿರಬೇಕು ಎನ್ನುವ ಐತಿಹಾಸಿಕ ಕಾನೂನು ತಂದ ಹಿನ್ನೆಲೆಯಲ್ಲಿ ಕೈಗಾರಿಕೆ, ಅಂಗಡಿ ಮುಂಗಟ್ಟುಗಳು, ಹಾಗೂ ವಾಣಿಜ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕನ್ನಡ ಇಂದು ರಾರಾಜಿಸುವಂತಾಗಿದೆ .
ಗೋವಾದಲ್ಲಿ ಕನ್ನಡ ಭವನ ನಿರ್ಮಿಸುವ ಸಲುವಾಗಿ ಅಲ್ಲಿನ ಸರ್ಕಾರದೊಂದಿಗೆ ವ್ಯವಹರಿಸಿ ಸ್ಥಳ ಗುರುತಿಸಲಾಗಿದ್ದು ಅದಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್,
ಸಾರಿಗೆ ಸಚಿವ ರಾಮಲಿಂಗರೆಡ್ಡಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,
ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಚನ್ನಪ್ಪ ಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎನ್.ಮಂಜುಳ , ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.