ಬಯೋಮೆಟ್ರಿಕ್ ಹಾಜರಾತಿ ನಿರ್ಬಂಧ, ಉಲ್ಲಂಘನೆ ಮಾಡಿದರೆ ಶಿಸ್ತು ಕ್ರಮ
ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಕರ್ತವ್ಯ ಸಮಯದಲ್ಲಿ ಬೇರೆಡೆ ಪ್ರೈವೇಟ್ ಪ್ರಾಕ್ಟೀಸ್ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಕರ್ತವ್ಯ ಸಮಯದಲ್ಲಿ ಬೇರೆಡೆ ಸೇವೆ ಸಲ್ಲಿಸುತ್ತಾರೆ ಎಂಬ ಆರೋಪ ಕೇಳಿಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. ಈ ದುರ್ಬಳಕೆಯನ್ನು ತಡೆಗಟ್ಟಲು ಬಯೋಮೆಟ್ರಿಕ್ ಹಾಜರಾತಿಯನ್ನು ದಿನಕ್ಕೆ ನಾಲ್ಕು ಬಾರಿ ಕಡ್ಡಾಯಗೊಳಿಸಲಾಗಿದ್ದು, ವೈದ್ಯರು ಬೆಳಿಗ್ಗೆ 9, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಹಾಜರಾತಿ ಮಾಡಲೇಬೇಕು. ಹಾಜರಾತಿಯ ಆಧಾರದ ಮೇಲೆ ಸಂಬಳ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಮೊದಲು 2 ಗಂಟೆಗಳ ನಂತರ 1 ಗಂಟೆ ವಿಶ್ರಾಂತಿ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕೆಲ ವೈದ್ಯರು ತಡವಾಗಿ ಆಗಮನ ಅಥವಾ ಮುಂಚಿತವಾಗಿ ನಿರ್ಗಮನ ಮಾಡುತ್ತಿರುವುದರಿಂದ ಇತ್ತೀಚಿನ ಹೊಸ ನಿಯಮಗಳು ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ವ್ಯವಸ್ಥೆ ಕಡ್ಡಾಯ
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆ ಎಂದು ಸಚಿವರು ತಿಳಿಸಿದರು. ಈ ನಿಟ್ಟಿನಲ್ಲಿ ಒಪಿಡಿ ಸೇವೆಯನ್ನು ಕಡ್ಡಾಯಗೊಳಿಸಿ, ಅಗತ್ಯವಿರುವ ರೋಗಿಗಳಿಗೆ ಸಮಯೋಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗದ ಮೆಗಾನ್ ಆಸ್ಪತ್ರೆಯಲ್ಲಿ ಕೆಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿದ್ದು, ಸ್ವತಃ ಭೇಟಿ ನೀಡಿ ಸಮಸ್ಯೆ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಲ್ಲದೆ, ಶಿವಮೊಗ್ಗಕ್ಕೆ 100 ಹಾಸಿಗೆ ಆಸ್ಪತ್ರೆ ಮಂಜೂರು ಮಾಡುವ ಪ್ರಸ್ತಾವನೆ ಪ್ರಾಥಮಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆ ಸುಗಮಗೊಳ್ಳಲು ಈ ಕ್ರಮಗಳು ಸಹಾಯಕವಾಗಲಿವೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.