ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯ ವಿಷಯವನ್ನು ಎಐಸಿಸಿ ಹೈಕಮಾಂಡ್‌ಗೆ ಸಂಪೂರ್ಣವಾಗಿ ಬಿಟ್ಟಿದ್ದು, ಯಾರೂ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಯ ವಿಷಯ ಹೈಕಮಾಂಡ್‌ಗೆ ಬಿಟ್ಟಿದೆ. ಈ ಕುರಿತು ಯಾವುದೇ ಊಹಾಪೋಹಗಳಿಗೆ ಒಳಗಾಗದಂತೆ ಎಲ್ಲರೂ ಗಮನಹರಿಸಬೇಕು. ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಯಾರೂ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ
ಕೆಲವು ಶಾಸಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, “ನಾನು ಈ ಬಗ್ಗೆ ಯಾವುದೇ ಟೀಕೆ-ಟಿಪ್ಪಣಿಗಳನ್ನು ಮಾಡುವುದಿಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರು ರಾಜ್ಯದ ಪರಿಸ್ಥಿತಿಯ ಬಗ್ಗೆ ವಿವರವಾಗಿ ಚರ್ಚಿಸಿ, ಸೂಕ್ತ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸುತ್ತಾರೆ” ಎಂದರು.
ಸಂವಿಧಾನ ಬದಲಾವಣೆಗೆ ಉಗ್ರ ಹೋರಾಟದ ಎಚ್ಚರಿಕೆ
ಆರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, “ಅವರು ಮನುಸ್ಮೃತಿಯನ್ನು ಬೆಂಬಲಿಸುವವರು. ಸಮಾಜವಾದ ಮತ್ತು ಜಾತ್ಯತೀತತೆಯನ್ನು ಅವರು ಒಪ್ಪಿಕೊಳ್ಳುವುದಿಲ್ಲ. ಆರ್‌ಎಸ್‌ಎಸ್ ಯಾವಾಗಲೂ ಬಡವರ ವಿರುದ್ಧವಾಗಿದೆ. ಸಂವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಿದರೆ, ನಾವು ಉಗ್ರ ಹೋರಾಟ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಡಿಕೆಶಿಗೆ ಸಿಎಂ ಸ್ಥಾನದ ಊಹಾಪೋಹ
ರಾಮನಗರದ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಂದಿನ ಎರಡು-ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. “ಕಾಂಗ್ರೆಸ್‌ನ ಈ ವಿಜಯಕ್ಕೆ ಶಿವಕುಮಾರ್ ಅವರ ಕಾರ್ಯತಂತ್ರ ಮತ್ತು ಶ್ರಮವೇ ಕಾರಣ. ಹೈಕಮಾಂಡ್ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತದೆ” ಎಂದು ಇಕ್ಬಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಶಿವಕುಮಾರ್ ಅವರು ಈ ವರ್ಷದ ಸೆಪ್ಟೆಂಬರ್ ನಂತರ ಮುಖ್ಯಮಂತ್ರಿಯಾಗಬಹುದು ಎಂಬ ಪ್ರಶ್ನೆಗೆ, “ಹೌದು, ರಾಜಕೀಯ ಕ್ರಾಂತಿಯ ಸೂಚನೆಯನ್ನು ಕೆಲವು ನಾಯಕರು ನೀಡುತ್ತಿದ್ದಾರೆ. ಎರಡು-ಮೂರು ತಿಂಗಳೊಳಗೆ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ” ಎಂದು ಇಕ್ಬಾಲ್ ತಿಳಿಸಿದರು.