ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿ ಸಾರಿ ಹೇಳಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ‘ಬೃಹತ್ ಜನಾಕ್ರೋಶ ಮಹಿಳಾ ಪ್ರತಿಭಟನಾ ಸಭೆ’ಯಲ್ಲಿ ಮಾತನಾಡುತ್ತಾ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಯಲ್ಲಿ ನಾರಿ ಶಕ್ತಿಯ ಮಹತ್ವದ ಪಾತ್ರವನ್ನು ಅರ್ಥಮಾಡಿಕೊಂಡಿರುವುದಾಗಿ ವಿಜಯೇಂದ್ರ ಹೇಳಿದರು. ಮೋದಿಯವರ ಸಂಕಲ್ಪಕ್ಕೆ ಬೆಂಬಲ ನೀಡಲು ಸುತ್ತಮುತ್ತಲಿನ ಜಿಲ್ಲೆಗಳಿಂದ ಬಂದ ಮಹಿಳೆಯರು ಮತ್ತು ಜನರನ್ನು ಅವರು ಅಭಿನಂದಿಸಿದರು.
“ಬಿಜೆಪಿ ಯಾವತ್ತೂ ತಾಯಂದಿರ ಪರ ನಿಲ್ಲುತ್ತದೆ. ಮುಂದಿನ ದಿನಗಳಲ್ಲೂ ಈ ಹೋರಾಟವನ್ನು ಮುಂದುವರಿಸೋಣ” ಎಂದು ವಿಜಯೇಂದ್ರ ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದರು ಮತ್ತು ಬೈಸಿಕಲ್ ಯೋಜನೆಯನ್ನು ತಂದಿದ್ದರು ಎಂದು ನೆನಪಿಸಿಕೊಂಡ ಅವರು, ಬಿಜೆಪಿ ನಾರಿ ಶಕ್ತಿಗೆ ನಿರಂತರವಾಗಿ ಗೌರವ ನೀಡುತ್ತಿದೆ ಎಂದು ವಿವರಿಸಿದರು.
ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ವಿಜಯೇಂದ್ರ ವಿನಂತಿಸಿದರು.
ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ್ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕ ಅವಿನಾಶ್, ಶ್ರೀಮತಿ ರೂಪಾಲಿ ನಾಯಕ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ. ಮಂಜುಳಾ, ವಿವಿಧ ಶಾಸಕರು, ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.











