ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವ ಗುರಿಯೊಂದಿಗೆ ಮುಂಬರುವ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಗತ್ಯ ಅನುದಾನ ಬೇಡಿಕೆಗಳನ್ನು ಸಿದ್ಧಪಡಿಸುವ ಸಲುವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಪೂರ್ವಭಾವಿ ಸಭೆ ನಡೆಯಿತು.
ಫೆಬ್ರವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಜೆಟ್ ಪೂರ್ವಭಾವಿ ಸಭೆಗೆ ಇಲಾಖೆಯ ಪ್ರಸ್ತಾವನೆಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಈ ಸುದೀರ್ಘ ಸಭೆ ನಡೆಸಲಾಯಿತು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತ ಶ್ರೀ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿ ಶ್ರೀಮತಿ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಶ್ರೀ ಭರತ್ ಎಸ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಶ್ರೀ ಪ್ರಕಾಶ್ ಜಿ ಟಿ ನಿಟ್ಟಾಲಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಶ್ರೀ ಹೆಚ್. ಬಸವರಾಜೇಂದ್ರ ಅವರು ಭಾಗವಹಿಸಿ, ಇಲಾಖೆಯ ಪ್ರಸ್ತುತ ಸ್ಥಿತಿ-ಗತಿ, ಸವಾಲುಗಳು ಮತ್ತು ಮುಂದಿನ ಆರ್ಥಿಕ ವರ್ಷದ ಅಗತ್ಯತೆಗಳ ಕುರಿತು ಸಚಿವರಿಗೆ ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆಗಳ’ (KPS) ಬಲವರ್ಧನೆಗೆ ಸಂಬಂಧಿಸಿದಂತೆ ವಿಶೇಷ ಚರ್ಚೆ ನಡೆಯಿತು. ರಾಜ್ಯಾದ್ಯಂತ KPS ಶಾಲೆಗಳನ್ನು ವಿಸ್ತರಿಸುವುದು, ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಕರ ನೇಮಕಾತಿ, ಡಿಜಿಟಲ್ ಶಿಕ್ಷಣ ಮತ್ತು ಇತರ ಪ್ರಮುಖ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆದಿದೆ.
ಈ ಸಭೆಯ ಮೂಲಕ ಇಲಾಖೆಯ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದ್ದು, ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಯಿತು. ಇವುಗಳನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂಬರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.
ಈ ಕ್ರಮಗಳು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿವೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.












