ಬೆಂಗಳೂರು: ಸಮಾಜದ ದಿಕ್ಕು ತಿದ್ದುವಲ್ಲಿ ಮಹತ್ವದ ಪಾತ್ರ ವಹಿಸಿರುವ ಪತ್ರಕರ್ತರಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದರು.
60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚದಲ್ಲಿ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು. ಅಲ್ಪ ಶುಲ್ಕವನ್ನು ಪಾವತಿಸಿದರೆ ಸಾಕು ಎಂದು ಅವರು ಹೇಳಿದರು.
ವೈದ್ಯಕೀಯ ಶಿಕ್ಷಣ ಇಲಾಖೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಹಿರಿಯ ಪತ್ರಕರ್ತರ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ಉಳಿದ ಶೇ.25ರಷ್ಟು ಮೊತ್ತದಲ್ಲಿಯೂ ರಿಯಾಯಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಪತ್ರಕರ್ತರು ಸರ್ಕಾರದ ಜವಾಬ್ದಾರಿಯಾಗಿದ್ದು, ನಿವೃತ್ತರಾದ ಹಿರಿಯ ಪತ್ರಕರ್ತರು ಗೌರವಯುತ ಜೀವನ ನಡೆಸಲು ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ ಬಳಿಕ ವೃತ್ತಿಯಿಂದ ನಿವೃತ್ತರಾದ ಹಿರಿಯ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಒದಗಿಸಲಾಗುತ್ತಿದ್ದು, ಈ ಸಂಬಂಧ ಇರುವ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಇನ್ನಷ್ಟು ಸರಳೀಕೃತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಪಾಟೀಲ್ ತಿಳಿಸಿದರು.
ಹಿರಿಯ ಪತ್ರಕರ್ತರಿಗೂ ಯಶಸ್ವಿನಿ ಆರೋಗ್ಯ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮದ ಪ್ರತಿನಿಧಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಮೂಲಕ ಗುರುತಿನ ಚೀಟಿ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್, ಹಿರಿಯ ಪತ್ರಕರ್ತರ ವೇದಿಕೆ ಅಧ್ಯಕ್ಷ ಆರ್.ಪಿ. ಸಾಂಬ ಸದಾಶಿವರೆಡ್ಡಿ, ಹಿರಿಯ ಅಧಿಕಾರಿಗಳು ಎಂ.ಎ. ಪೊನ್ನಪ್ಪ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.












