ಬೆಂಗಳೂರು, ಮೇ 1: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ಜಾತಿಗಣತಿ ನಡೆಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಸತತವಾಗಿ ಒತ್ತಾಯಿಸಿದ್ದರು. ಅವರ ಒತ್ತಡಕ್ಕೆ ಮಣಿದು ಕೇಂದ್ರ ಈಗ ಜಾತಿಗಣತಿಗೆ ನಿರ್ಧರಿಸಿದೆ,” ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಜಾತಿಗಣತಿ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, “ಜಾತಿಗಣತಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಮಾಜದ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಲು ಜನಸಂಖ್ಯೆಯ ಆಧಾರದ ಮೇಲೆ ಸೌಲಭ್ಯಗಳನ್ನು ವಿತರಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ ಮತ್ತು ಬೇಡಿಕೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೂ ಒಪ್ಪಿಗೆ ವ್ಯಕ್ತಪಡಿಸಿದ್ದಾರೆ,” ಎಂದರು.
ಕರ್ನಾಟಕ ಸರ್ಕಾರ ಜಾತಿಗಣತಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ ಅವರು, “ಈ ಪ್ರಕ್ರಿಯೆಗೆ ರಾಜ್ಯ ಸರ್ಕಾರದಿಂದ ಬೇಕಾದ ಎಲ್ಲ ಸಹಾಯವನ್ನು ಒದಗಿಸಲಾಗುವುದು,” ಎಂದು ಸ್ಪಷ್ಟಪಡಿಸಿದರು.












