ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಸ್ಥಳಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರು ಭೇಟಿ ನೀಡಿ, ವಿವರವಾದ ಪರಿಶೀಲನೆ ನಡೆಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಚಿವರು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿ, ಮತ್ತು ಬೆಂಗಳೂರು ನಗರ ಪೊಲೀಸರೊಂದಿಗೆ ಸುದೀರ್ಘ ಸಭೆ ನಡೆಸಿ, ಘಟನೆಯ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು ಚರ್ಚಿಸಿದರು.
ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ, “ಮುಖ್ಯಮಂತ್ರಿಗಳು ಈ ಘಟನೆ ಕುರಿತು ಮೆಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾಲ್ತುಳಿತ ಸಂಭವಿಸಿದ ಸ್ಥಳಗಳನ್ನು ಖುದ್ದಾಗಿ ಪರಿಶೀಲಿಸಿದ್ದೇನೆ. ಗೇಟ್ ಸಂಖ್ಯೆ 6, 7, 2, 2ಎ, 17, 18, 21, ಮತ್ತು 16ರಲ್ಲಿ ಕಾಲ್ತುಳಿತ ಉಂಟಾಗಿದೆ. ಘಟನೆ ಸ್ಥಳದಲ್ಲಿ ಯಾವುದೇ ಸಾವು ಸಂಭವಿಸಿಲ್ಲ, ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗ ಚಿಕಿತ್ಸೆ ವೇಳೆ ಕೆಲವರು ಮೃತಪಟ್ಟಿದ್ದಾರೆ. ಯಾವ ಗೇಟ್‌ನಲ್ಲಿ ಎಷ್ಟು ಜನ ಸಾವನ್ನಪ್ಪಿದರು ಎಂಬ ನಿಖರ ಮಾಹಿತಿ ಇನ್ನೂ ಲಭ್ಯವಿಲ್ಲ,” ಎಂದರು.
ವಿಧಾನಸೌಧದ ಮುಂದೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿತ್ತು. ಆದರೆ, ಕ್ರೀಡಾಂಗಣದ ಒಳಗೆ 40,000 ಮತ್ತು ಹೊರಗೆ ಸುಮಾರು 2.5 ಲಕ್ಷ ಜನ ಸೇರಿದ್ದರು ಎಂದು ಅಂದಾಜಿಸಲಾಗಿದೆ. ಮೆಟ್ರೋ ಸಂಸ್ಥೆಯ ಮಾಹಿತಿಯ ಪ್ರಕಾರ, ಆ ದಿನ 8.7 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. “ಇಷ್ಟೊಂದು ಜನ ಒಂದೇ ಕಡೆ ಸೇರಿದ ಉದಾಹರಣೆ ಇತಿಹಾಸದಲ್ಲಿ ಅಪರೂಪ. ದುರ್ದೈವವಶಾತ್ ಈ ದುರಂತ ಸಂಭವಿಸಿದೆ,” ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.
ಈ ಘಟನೆಯಿಂದಾಗಿ ಭವಿಷ್ಯದಲ್ಲಿ ಇಂತಹ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭದ್ರತೆ ಮತ್ತು ಜನಸಂದಣಿಯ ನಿರ್ವಹಣೆಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.