ಸಂಪೂರ್ಣ ತನಿಖೆ, ಭವಿಷ್ಯದ ಸುರಕ್ಷತಾ ಕ್ರಮಗಳಿಗೆ ಚರ್ಚೆಯ ಅಗತ್ಯ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಘಟನೆಯ ಸಂಪೂರ್ಣ ತನಿಖೆ ಮತ್ತು ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ಚರ್ಚೆಯ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ.
ಈ ದುರಂತವು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಮತ್ತು ಕ್ರೀಡಾ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. “ಈ ಘಟನೆಯಿಂದ ಜನರಲ್ಲಿ ಆತಂಕ ಮತ್ತು ಕಳವಳ ಉಂಟಾಗಿದೆ. ಆಡಳಿತದ ಲೋಪಗಳು, ಘಟನೆಯ ನಂತರ ಸರ್ಕಾರದ ಕ್ರಮಗಳು, ಮತ್ತು ಬಲಾಢ್ಯರನ್ನು ರಕ್ಷಿಸುವ ಪ್ರಯತ್ನಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳು ನಡೆಯುತ್ತಿವೆ ಎಂಬ ಆರೋಪಗಳಿವೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶುವನ್ನಾಗಿ ಮಾಡಲಾಗಿದೆ,” ಎಂದು ಆರ್.ಅಶೋಕ ಆರೋಪಿಸಿದ್ದಾರೆ.
ಮೂರು ದಿನಗಳ ತುರ್ತು ಅಧಿವೇಶನ ಕರೆಯುವಂತೆ ಆಗ್ರಹಿಸಿರುವ ಅವರು, ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸರ್ಕಾರದ ಯೋಜನೆಗಳ ಕುರಿತು ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.
“ಈ ತುರ್ತು ಅಧಿವೇಶನವು ಸರ್ಕಾರದ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದ ಕ್ರಮಗಳನ್ನು ರೂಪಿಸಲು ಸಹಾಯಕವಾಗಲಿದೆ. ಘಟನೆಯ ಕಾರಣಗಳನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.












