ಬೆಂಗಳೂರು: ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯದ ಪ್ರಸ್ತಾವನೆಯನ್ನು ಹಿಂದಕ್ಕೆ ಕಳುಹಿಸಿರುವ ಕಾರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮತ್ತೊಮ್ಮೆ ಪ್ರಸ্তಾವನೆಯನ್ನು ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಧಾನಸೌಧದ ಸಚಿವರ ಕಚೇರಿಯಲ್ಲಿ ಕೋಲಿ-ಕಬ್ಬಲಿಗ ಜನಾಂಗದ ಮುಖಂಡರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿದ ಸಚಿವ ಖರ್ಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣದೀಪ್ ಅವರಿಂದ ವಿವರಗಳನ್ನು ಪಡೆದರು. ಕೋಲಿ ಹಾಗೂ ಇತರ ಜನಾಂಗಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಎದುರಾಗಿರುವ ತಾಂತ್ರಿಕ ತೊಡಕುಗಳನ್ನು ಅವಲೋಕನ ಮಾಡಿ ವರದಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸೂಕ್ತ ಮಾಹಿತಿಯನ್ನು ಕ್ರೋಢೀಕರಿಸಿದ ಬಳಿಕ, ಕೋಲಿ-ಕಬ್ಬಲಿಗ ಜನಾಂಗದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಪ್ರಸ್ತಾವನೆಯನ್ನು ಪುನಃ ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕೋರಲಾಗುವುದು ಎಂದು ಸಚಿವ ಖರ್ಗೆ ತಿಳಿಸಿದರು.
ಸಭೆಯಲ್ಲಿ ಕಲಬುರಗಿ ಜಿಲ್ಲೆಯ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಶ್ರೀಮತಿ ಕನೀಜ್ ಫಾತಿಮಾ, ಎಂ.ವೈ. ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಕೋಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.