ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ದುರ್ಮರಣಕ್ಕೀಡಾಗಿದ್ದು, 20 ಜನರು ಗಾಯಗೊಂಡಿರುವ ಘಟನೆ ದಿಗ್ಬ್ರಮೆ ಉಂಟುಮಾಡಿದೆ. ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಏಕಾಏಕಿ ಕ್ಯಾಂಟರ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ.
ಈ ಘಟನೆಗೆ ಸಂಬಂಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಘಾಟ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿರುವ ಅವರು, ಗಾಯಾಳುಗಳಿಗೆ ತಕ್ಷಣವೇ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ದುರಂತದ ಬಗ್ಗೆ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.












