ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ ರೂ. 50 ಆರ್ಥಿಕ ಸಹಾಯವಾಗಿ ಒಟ್ಟು ರೂ. 300 ಕೋಟಿ ಬಿಡುಗಡೆ ಮಾಡಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ನವೆಂಬರ್ 8ರಂದು ವಿಧಾನಸೌಧದಲ್ಲಿ ಕರೆದಿದ್ದ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಫೇರ್ ಅಂಡ್ ರೆಮ್ಯೂನರೇಟಿವ್ ಪ್ರೈಸ್ (ಎಫ್‌ಆರ್‌ಪಿ) ಮೇಲೆ ರೂ. 100 ಹೆಚ್ಚುವರಿ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿದ್ದರು. ಈ ರೂ. 100ರಲ್ಲಿ ರಾಜ್ಯ ಸರ್ಕಾರ ರೂ. 50 ಹಾಗೂ ಸಕ್ಕರೆ ಕಾರ್ಖಾನೆಗಳು ರೂ. 50 ಭಾರವಹಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಈ ನಿರ್ಧಾರದಂತೆ ಸರ್ಕಾರ ತನ್ನ ಪಾಲಿನ ರೂ. 300 ಕೋಟಿ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದ್ದಾರೆ.
ಕಬ್ಬು ಅಭಿವೃದ್ಧಿ ಆಯುಕ್ತರು ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಜಿಲ್ಲಾಧಿಕಾರಿಗಳ ಮೂಲಕ ಹಣ ಬಿಡುಗಡೆ ಮಾಡಲಿದ್ದಾರೆ. ರೈತರು ಪೂರೈಸಿದ ಕಬ್ಬಿನ ಪ್ರಮಾಣದ ಆಧಾರದ ಮೇಲೆ ಪ್ರತಿ ಟನ್‌ಗೆ ರೂ. 50 ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಕೂಡ ಪ್ರತಿ ಟನ್‌ಗೆ ರೂ. 50 ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ 2025-26 ಹಂಗಾಮಿನಲ್ಲಿ ರಾಜ್ಯದ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುತ್ತಿವೆ. ಇದರಲ್ಲಿ 29 ಕಾರ್ಖಾನೆಗಳಲ್ಲಿ ನುರಿಸುವಿಕೆ ಮುಗಿದಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಅವರು ವಿವರಿಸಿದ್ದಾರೆ.
ಮಾರ್ಚ್ ಮೊದಲ ವಾರದ ವೇಳೆಗೆ ಕಬ್ಬು ನುರಿಸುವಿಕೆ ಅಂತ್ಯಗೊಳ್ಳಲಿದ್ದು, 600 ಲಕ್ಷ ಟನ್ ಅಂದಾಜಿನ ಆಧಾರದ ಮೇಲೆ ರೂ. 300 ಕೋಟಿ ನೆರವು ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಅವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಕ್ರಮವು ಕಬ್ಬು ಬೆಳೆಗಾರರಿಗೆ ಆರ್ಥಿಕ ಸಹಾಯ ನೀಡುವ ಮೂಲಕ ರಾಜ್ಯದ ಸಕ್ಕರೆ ಉದ್ಯಮವನ್ನು ಬಲಪಡಿಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.












