ಬೆಂಗಳೂರು: 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ (MSP) ಯೋಜನೆ ಅಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ. 7,721 ದರದಲ್ಲಿ ಖರೀದಿ ಮಾಡಲು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಪ್ರಕಾರ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಲಾಗಿದೆ.
ಖರೀದಿ ಸಂಸ್ಥೆಗಳು:
ಕೇಂದ್ರ ಸರ್ಕಾರದ ಪರವಾಗಿ ನಾಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಸಂಸ್ಥೆಗಳನ್ನು, ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿಯನ್ನು ನೇಮಕ ಮಾಡಲಾಗಿದೆ.
ನೋಂದಣಿ ಅವಧಿಯನ್ನು 50 ದಿನಗಳು ಮತ್ತು ಖರೀದಿ ಅವಧಿಯನ್ನು 60 ದಿನಗಳು ಎಂದು ನಿಗದಿಪಡಿಸಲಾಗಿದೆ. ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಒಟ್ಟಿಗೆ ಆರಂಭಿಸುವಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ಗ್ರಾಮೀಣ ರೈತರಿಗೆ ಸೌಲಭ್ಯವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯಗಳಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚನೆ ನೀಡಲಾಗಿದೆ. ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ತಿಳಿಸಲಾಗಿದೆ.
ರೈತರ ಹೆಸರಿನಲ್ಲಿ ವರ್ತಕರು ಅಥವಾ ಇತರರು ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಚ್ಚರಿಸಲಾಗಿದೆ. ಖರೀದಿ ಪ್ರಗತಿಯ ವಿವರಗಳನ್ನು ಪ್ರತಿದಿನ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.












