ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಕೇವಲ ಆಡಳಿತಾತ್ಮಕ ವೈಫಲ್ಯವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹ ಎಂದು ತೀವ್ರ ಟೀಕೆ ಮಾಡಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಸಿದ್ದರಾಮಯ್ಯ ಅವರು, “ಕರ್ನಾಟಕದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಿಂಗಳುಗಳ ಕಾಲ ಶ್ರಮಪಟ್ಟು ತಯಾರಿ ಮಾಡಿ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಭಾರಿ ಖರ್ಚು ಮಾಡಿದ್ದರು. ಆದರೆ ಕೇಂದ್ರ ಸರ್ಕಾರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ” ಎಂದು ಹೇಳಿದ್ದಾರೆ.
2024ರಲ್ಲಿ ನೀಟ್‌ಗೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ
2024ರಲ್ಲೇ ಕರ್ನಾಟಕ ಸರ್ಕಾರ ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ, ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪಿಸಿ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು ಎಂದು ಸಿದ್ದರಾಮಯ್ಯ ನೆನಪಿಸಿದ್ದಾರೆ. “ಅಂದು ನಾವು ಹೇಳಿದ್ದು ಎಷ್ಟು ಸತ್ಯವಾಗಿದೆ ಎಂಬುದನ್ನು ಇಂದಿನ ಪರೀಕ್ಷಾ ರದ್ದತಿ ಸಾಬೀತುಪಡಿಸಿದೆ” ಎಂದು ಹೇಳಿದ್ದಾರೆ.
ಪೇಪರ್ ಲೀಕ್ ಪ್ರಕರಣಗಳು ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದ ಮುಖ್ಯಮಂತ್ರಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಾರದರ್ಶಕ ತನಿಖೆಗೆ ಒತ್ತಾಯ
ಪೇಪರ್ ಲೀಕ್ ಪ್ರಕರಣದಲ್ಲಿ ಪಾರದರ್ಶಕ ಮತ್ತು ಕಾಲಮಿತಿಯ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಸ್ಪಷ್ಟನೆ ನೀಡಬೇಕು ಮತ್ತು ರಾಜ್ಯಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
“ಪೇಪರ್ ಲೀಕ್‌ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ” ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.












