ಬೆಂಗಳೂರು: ಗ್ರಾಮ ಪಂಚಾಯತಿಗಳನ್ನು ಆರ್ಥಿಕ ಬೆಳವಣಿಗೆಯ ಎಂಜಿನ್‌ಗಳಾಗಿ ಪರಿವರ್ತಿಸುವತ್ತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒಗಳು) ಗಮನ ಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಬೇಡಿಕೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ ಸಚಿವರು, “ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಆರ್ಥಿಕ ಸುಧಾರಣೆಯ ಸಾಧ್ಯತೆಗಳನ್ನು ಅಧ್ಯಯನ ಮಾಡಿ, ಗ್ರಾಮ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು” ಎಂದು ಹೇಳಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ವೃಂದವರು ಸಚಿವರನ್ನು ಭೇಟಿ ಮಾಡಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ, ಇಲಾಖಾ ಅಧಿಕಾರಿಗಳಿಗೆ ಆದ್ಯತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯ್ಕೆ ಶ್ರೇಣಿ ಅಧಿಕಾರಿಗಳನ್ನು ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಪರಿಗಣಿಸುವುದು ಸೇರಿದಂತೆ ಹಲವು ಮುಖ್ಯ ಬೇಡಿಕೆಗಳನ್ನು ಮಂಡಿಸಿದರು.
ಈ ಬೇಡಿಕೆಗಳ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ರಣ್ದೀಪ್ ಹಾಗೂ ಡಾ. ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು.












