ಬೆಂಗಳೂರು: ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕಲಾಗ್ರಾಮ, ಮಲ್ಲತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ 40 ಕೃತಿಗಳ ಬಿಡುಗಡೆ ಮತ್ತು ‘ಕನಕ ಶಿಲ್ಪವನ’ದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನಕದಾಸರು ಭಕ್ತಿ ಪಂಥದ ಕವಿಯಾಗಿರುವುದರ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಮಾಜ ಸುಧಾರಕರೂ ಆಗಿದ್ದರು. ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಅವರು ಸಮಸಮಾಜದ ಕನಸು ಕಂಡರು ಎಂದು ಸಿದ್ದರಾಮಯ್ಯ ಸ್ಮರಿಸಿದರು.
ಇಂದಿನ ಪೀಳಿಗೆ ಅರಿತುಕೊಳ್ಳಬೇಕು
ಇಂದಿಗೂ ಕನಕದಾಸರು ಹಾಗೂ ಬಸವಣ್ಣ ಬಯಸಿದ ಸಮಾಜ ನಿರ್ಮಾಣವಾಗಿಲ್ಲ. ಆದ್ದರಿಂದ ಇಂದಿನ ಯುವ ಪೀಳಿಗೆ ಅವರ ಬಗ್ಗೆ ಹೆಚ್ಚು ಅರಿತುಕೊಳ್ಳುವುದು ಅತ್ಯವಶ್ಯ ಎಂದು ಅವರು ಒತ್ತು ನೀಡಿದರು.
ದಾಸ ಸಾಹಿತ್ಯ ಮತ್ತು ವಚನ ಸಾಹಿತ್ಯವನ್ನು ಅನೇಕ ಭಾಷೆಗಳಿಗೆ ಅನುವಾದಗೊಳಿಸಲಾಗಿದೆ. ಕನಕದಾಸರ ಕೃತಿಗಳು ಬೇರೆ ರಾಜ್ಯಗಳಿಗೂ ತಲುಪುತ್ತಿರುವುದು ಸಂತಸದ ವಿಷಯವೆಂದು ಸಿಎಂ ಹೇಳಿದರು. ಇತಿಹಾಸವನ್ನು ಅರಿಯದಿದ್ದರೆ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಗುರುತಿಸಲು ಸಾಧ್ಯವಿಲ್ಲ ಎಂದೂ ಅವರು ಹೇಳಿದರು.
ಬಹುಮುಖ ಪ್ರತಿಭೆ ಕನಕದಾಸ
ಕನಕದಾಸರು ಬಹುಮುಖ ಪ್ರತಿಭೆಯುಳ್ಳವರಾಗಿದ್ದು, 350ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಕೃತಿಗಳನ್ನು ಬೇರೆ ಬೇರೆ ಭಾಷೆಗಳಿಗೆ ಅನುವಾದ ಮಾಡಿದ ಭಾಷಾಂತರಕಾರರನ್ನು ಸರ್ಕಾರದ ಪರವಾಗಿ ಅಭಿನಂದಿಸಿದರು.
ಸಂತ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರ ನೇತೃತ್ವದಲ್ಲಿ ಕನಕದಾಸರ ಕೃತಿಗಳು ಈಗಾಗಲೇ 14 ಭಾಷೆಗಳಿಗೆ ಭಾಷಾಂತರಗೊಂಡಿವೆ. ಇದು ಅವರ ಸಾಹಿತ್ಯವು ದೇಶ-ವಿದೇಶಗಳಿಗೆ ತಲುಪಲು ಸಹಕಾರಿಯಾಗಿದೆ. ಈ ಪುಸ್ತಕಗಳ ಹೆಚ್ಚಿನ ಮುದ್ರಣಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನಕದಾಸರ ಬಗ್ಗೆ ತಿಳಿಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಶಾಸಕರಾಗಿದ್ದ ಸಂದರ್ಭದಿಂದಲೂ ತಾವು ಕನಕದಾಸ ಜಯಂತಿ ಆಚರಣೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಮುನಿರತ್ನ, ಸಾಹಿತಿ ಬಂಜಗೆರೆ ಜಯಪ್ರಕಾಶ್ ಉಪಸ್ಥಿತರಿದ್ದರು.












