ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ವಿದ್ಯಾರ್ಥಿಗಳು ತೀವ್ರ ಬೇಸರ ಮತ್ತು ಆತಂಕಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, “ಯುವ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಶ್ಲಾಘನೀಯ ಕೆಲಸ. ಇಂತಹ ಗಂಭೀರ ಪರಿಸ್ಥಿತಿ ಏಕೆ ಉಂಟಾಯಿತು ಎಂಬುದನ್ನು ಪ್ರಧಾನಮಂತ್ರಿ, ಬಿಜೆಪಿ ನಾಯಕರು, ಸಂಸದರು ಹಾಗೂ ಕೇಂದ್ರ ಸಚಿವರು ಜನತೆಗೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.
ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದನ್ನು ಪ್ರಧಾನಮಂತ್ರಿಯವರೇ ಒಪ್ಪಿಕೊಂಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. “ಇದರಿಂದ ಜನರ ಮೇಲಾಗುತ್ತಿರುವ ಪರಿಣಾಮವೇನು? ಜನರನ್ನು ಹೇಗೆ ರಕ್ಷಿಸುತ್ತಾರೆ? ಇದಕ್ಕೆ ಸರ್ಕಾರವು ಉತ್ತರ ನೀಡಬೇಕು” ಎಂದು ಅವರು ಒತ್ತಾಯಿಸಿದರು.
ಚಾಮರಾಜನಗರದಲ್ಲಿ ಕಾಲದ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, “ಕಾಲ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದೇನೆ” ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.











