ಕರ್ನಾಟಕಕ್ಕೆ ಶುಭಸುದ್ದಿ; ಕೇಂದ್ರದ ತೀರ್ಮಾನ ಬಾಕಿ
ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದನ್ನು ಕರ್ನಾಟಕಕ್ಕೆ ಶುಭಸುದ್ದಿ ಎಂದು ವಿಶೇಷಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಕರ್ನಾಟಕಕ್ಕೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸುತ್ತೇವೆ” ಎಂದರು.
ಅವರು ಮುಂದುವರೆದು, “ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲೇ ನಮಗೆ ಸ್ಪಷ್ಟ ಸೂಚನೆ ನೀಡಿದ್ದು, ತಮಿಳುನಾಡಿನ ಪಾಲಿನ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಷರತ್ತು ವಿಧಿಸಿದೆ. ಈಗ ಈ ಯೋಜನೆ ಕುರಿತು ಅಂತಿಮ ತೀರ್ಮಾನ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾವು ಪರಿಷ್ಕೃತ ಡಿಪಿಆರ್ ಸಲ್ಲಿಕೆ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದರು.
ಕರ್ನಾಟಕ ಸರ್ಕಾರ ಈಗಾಗಲೇ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರಣಾ ಯೋಜನಾ ವರದಿ (ಡಿಪಿಆರ್) ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರದ ಅನುಮೋದನೆ ಬಂದ ನಂತರ ಯೋಜನೆಯ ಕಾರ್ಯಾಚರಣೆಗೆ ಮುಂದಾಗುವ ಯೋಜನೆಯಿದೆ.












