ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯಕ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.
ಈ ಸಮೀಕ್ಷೆಯು ರಾಜ್ಯದ ಸುಮಾರು 7 ಕೋಟಿ ಜನಸಂಖ್ಯೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ವಿವರವಾಗಿ ದಾಖಲಿಸುವ ಮಹತ್ವದ ವರದಿಯಾಗಿದೆ. 2025ರ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆದ ಈ ಸಮೀಕ್ಷೆಯು ಹಿಂದುಳಿದ ವರ್ಗಗಳ ಆಯೋಗದ ಮೂಲಕ ವೈಜ್ಞಾನಿಕವಾಗಿ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ. ದಯಾನಂದ ಹಾಗೂ ಇನ್ನಿತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧುಸೂದನ್ ನಾಯಕ್ ಅವರನ್ನು ಅಭಿನಂದಿಸಿದ್ದಾರೆ. ಈ ವರದಿಯು ರಾಜ್ಯದಲ್ಲಿ ಮೀಸಲಾತಿ ನೀತಿ, ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮುಂದಿನ ನಿರ್ಧಾರಗಳಿಗೆ ಮಾರ್ಗದರ್ಶನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ವರದಿಯ ವಿವರಗಳನ್ನು ಶೀಘ್ರದಲ್ಲೇ ಮಂತ್ರಿಮಂಡಲ ಸಭೆಯಲ್ಲಿ ಚರ್ಚಿಸಲಾಗುವ ಸಾಧ್ಯತೆ ಇದೆ.












