ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಪುಟ ದರ್ಜೆಯ 12 ಮಂತ್ರಿಗಳು ಸಹ ರಾಜ್ಯಪಾಲರಿಂದ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸಿದ ಮಂತ್ರಿಗಳು:
- ಕೆ.ಹೆಚ್. ಮುನಿಯಪ್ಪ ಮತ್ತು ಕೆ.ಜೆ. ಜಾರ್ಜ್ – ದೇವರ ಹೆಸರಿನಲ್ಲಿ
- ಎಂ.ಬಿ. ಪಾಟೀಲ್ – ವಿಶ್ವಗುರು ಅಣ್ಣ ಬಸವಣ್ಣ, ಬಸವಾದಿ ಶರಣರು ಮತ್ತು ವಿಶ್ವೈಕ್ಯ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಿನಲ್ಲಿ
- ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ – ಶ್ರದ್ಧಾಪೂರ್ವಕ ಪ್ರಮಾಣ
- ಯು.ಟಿ. ಖಾದರ್ – ದೇವರ ಹೆಸರಿನಲ್ಲಿ
- ಈಶ್ವರ ಖಂಡ್ರೆ – ದೇವರು ಮತ್ತು ಲಿಂಗೈಕ್ಯ ಚೆನ್ನಬಸವಯ್ಯ ಪಟ್ಟದೇವರ ಹೆಸರಿನಲ್ಲಿ
- ಯತೀಂದ್ರ ಸಿದ್ದರಾಮಯ್ಯ – ಸಂವಿಧಾನದ ಹೆಸರಿನಲ್ಲಿ
- ಬೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ – ದೇವರ ಹೆಸರಿನಲ್ಲಿ
ಪ್ರಮಾಣ ವಚನ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವೀಂದರ್ ಸಿಂಗ್ ಸುಖು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳ ಮುಖ್ಯಮಂತ್ರಿ ವಿ.ಟಿ. ಸತೀಶನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು, ವಿವಿಧ ರಾಜ್ಯಗಳ ಉಪಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಸರ್ವಧರ್ಮ ಗುರುಗಳು, ರೈತ ಮುಖಂಡರು, ದಲಿತ ಹಾಗೂ ಹಿಂದುಳಿದ ವರ್ಗಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಕಲಾವಿದರು, ಕ್ರೀಡಾಪಟುಗಳು, ಉದ್ಯಮಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಮಾರಂಭಕ್ಕೆ ಭಾಗವಹಿಸಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.










