ಬೆಂಗಳೂರು: ರಾಜ್ಯದಲ್ಲಿ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28 ರ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಅವರು ಇದನ್ನು ತಿಳಿಸಿದ್ದು, ಭಾರತವು ಕಳೆದ 14 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಮತ್ತು ನೆರೆಯ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ ಎಂದು ಹೇಳಿದ್ದಾರೆ. ಭಾರತದ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಮೇರೆಗೆ ಈ ಅಭಿಯಾನ ನಡೆಯಲಿದೆ ಎಂದು ಅವರು ವಿವರಿಸಿದರು.
ಬೂತ್‌ಗಳಲ್ಲಿ ಲಸಿಕೆ, ನಂತರ ಮನೆ ಮನೆಗೆ ಭೇಟಿ
ಜೂನ್ 28 ರಂದು ರಾಜ್ಯಾದ್ಯಂತ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ನಂತರ 2 ರಿಂದ 3 ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕುವರು. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಲ್ಲಿರುವ ಪ್ರದೇಶಗಳು ಮತ್ತು ನಗರಗಳ ಕೊಳಗೇರಿ ಪ್ರದೇಶಗಳಲ್ಲಿರುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ
ಈ ಬೃಹತ್ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರ ಬಯಸುವ ಆರೋಗ್ಯ ಇಲಾಖೆಯು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಇಲಾಖೆಗೆ ನಿರ್ದೇಶನ ನೀಡಿದೆ. ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಮತ್ತು ಎಫ್‌ಎಂ ರೇಡಿಯೋಗಳಲ್ಲಿ ಜಿಂಗಲ್‌ಗಳ ಮೂಲಕ ಪ್ರಚಾರ ಮಾಡುವಂತೆ ಕೋರಲಾಗಿದೆ.
ಸಾರ್ವಜನಿಕರು ಮತ್ತು ಪೋಷಕರು ತಮ್ಮ 0-5 ವರ್ಷದ ಮಕ್ಕಳಿಗೆ ತಪ್ಪದೆ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.










