ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರದ ಬದ್ಧತೆ:
ಬೆಂಗಳೂರು: ರಾಜ್ಯ ಹಾಗೂ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಪಾತ್ರ ಮಹತ್ವದ್ದಾಗಿದ್ದು, ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿದ್ದ ಎಂಎಸ್‌ಎಂಇ ದಿನಾಚರಣೆ ಹಾಗೂ ‘ಇ-ಖಾತಾ ಮತ್ತು ನಗರಾಭಿವೃದ್ಧಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವುದು ಎಂಎಸ್‌ಎಂಇ ವಲಯವಾಗಿದ್ದು, ದೇಶದ ಜಿಡಿಪಿಗೆ ಶೇ.31 ಹಾಗೂ ರಫ್ತು ವಲಯಕ್ಕೆ ಶೇ.45ರಿಂದ 48ರಷ್ಟು ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಕೈಗಾರಿಕಾ ಪ್ರದೇಶಗಳು ಗ್ರಾಮ ಪಂಚಾಯಿತಿ ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗುವ ಸಂದರ್ಭಗಳಲ್ಲಿ ಉಂಟಾಗಿರುವ ಆಸ್ತಿ ತೆರಿಗೆ ಗೊಂದಲಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಆಸ್ತಿಗಳನ್ನು ಪಾಲಿಕೆ ವ್ಯಾಪ್ತಿಗೆ ಸಮರ್ಪಕವಾಗಿ ಹಸ್ತಾಂತರಿಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇ-ಖಾತಾ ವ್ಯವಸ್ಥೆ ಕುರಿತು ಮಾತನಾಡಿದ ಸಚಿವರು, ಪಾರದರ್ಶಕತೆ ಹಾಗೂ ತ್ವರಿತ ಸೇವೆಗಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ 20.26 ಲಕ್ಷ ಆಸ್ತಿಗಳ ಪೈಕಿ ಶೇ.40ರಷ್ಟು ಆಸ್ತಿಗಳಿಗೆ ಮಾತ್ರ ಇ-ಖಾತಾ ನೀಡಲಾಗಿದೆ ಎಂದರು. ತಾಂತ್ರಿಕ ದೋಷಗಳು ಹಾಗೂ ಕಾಗುಣಿತ ತಪ್ಪುಗಳ ತಿದ್ದುಪಡಿಗೆ ಈಗಾಗಲೇ ಶೇ.10ರಷ್ಟು ವಿನಾಯಿತಿ ನೀಡಲಾಗಿದ್ದು, ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ಪ್ರದೇಶಗಳಿಗೆ ಟ್ಯಾಂಕರ್ ಮುಕ್ತ ನೀರು ಪೂರೈಕೆ, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ಆದ್ಯತೆ ನೀಡಲಿದೆ. ನೀರಿನ ದರ ಹಾಗೂ ಆಸ್ತಿ ತೆರಿಗೆಯನ್ನು ಮರುಪರಿಶೀಲಿಸಿ ಉದ್ಯಮ ಸ್ನೇಹಿ ನೀತಿಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.
ವಿವಿಧ ಇಲಾಖೆಗಳ ಪರವಾನಗಿ ಮತ್ತು ಪ್ರಮಾಣಪತ್ರಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬವನ್ನು ನಿವಾರಿಸಲು ಕೈಗಾರಿಕೆಗಳಿಗಾಗಿ ವಿಶೇಷ ‘ಏಕಗವಾಕ್ಷಿ’ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಚಿವರು ಹೇಳಿದರು.
ಉದ್ಯಮಿಗಳ ಸಮಸ್ಯೆಗಳಿಗೆ ಕೇವಲ ಭರವಸೆ ನೀಡುವುದಲ್ಲದೆ, ಎಫ್‌ಕೆಸಿಸಿಐ ಸಲ್ಲಿಸುವ ಲಿಖಿತ ವರದಿಗಳ ಆಧಾರದ ಮೇಲೆ ಸ್ಪಷ್ಟ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ಮುಂದೆಯೂ ಉದ್ಯಮಿಗಳು ಹಾಗೂ ಎಫ್‌ಕೆಸಿಸಿಐ ಜತೆ ನಿರಂತರ ಸಮಾಲೋಚನೆ ನಡೆಸಿ ಕೈಗಾರಿಕಾ ವಲಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್, ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಸುಜ್ಞಾನ್ ಹಿರೇಮಠ್, ಕೈಗಾರಿಕಾ ಸಮಿತಿ ಅಧ್ಯಕ್ಷ ಅರವಿಂದ್ ಬುರ್ಜಿ, ಮಾಜಿ ಅಧ್ಯಕ್ಷ ಆರ್. ಶಿವಕುಮಾರ್ ಸೇರಿದಂತೆ ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.










