ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆಆಗಸ್ಟ್ 15ರೊಳಗೆ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ
ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ತಮಿಳುನಾಡಿಗೆ ಖಡಕ್ ತಿರುಗೇಟು ನೀಡಿದ್ದಾರೆ.
ಮೇಕೆದಾಟು ಯೋಜನೆಯನ್ನು ತಡೆಯಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ರಾಜ್ಯ ಸರ್ಕಾರವು ಖಂಡಿತವಾಗಿಯೂ ಈ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳು ಆಕ್ಷೇಪ ಎತ್ತುವಂತಿಲ್ಲ ಎಂದು ಸ್ವತಃ ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಆಗಸ್ಟ್ 15ರೊಳಗೆ ಕೇಂದ್ರಕ್ಕೆ ಡಿಪಿಆರ್ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
“ಯೋಜನೆಗೆ ತಡೆ ಒಡ್ಡಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ. ಅವರು ತಮ್ಮ ವಿಧಾನಸಭೆಯಲ್ಲಿ ನಿರ್ಣಯ ಮಾಡಿಕೊಳ್ಳಲಿ, ಅದಕ್ಕೆ ಬೆಲೆ ಇಲ್ಲ. ಈ ಹಿಂದೆ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಎರಡು ಬಾರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿದೆ. ನಾವು ಮೇಕೆದಾಟು ಯೋಜನೆಯನ್ನು ಮಾಡಿಯೇ ಸೀರುತ್ತೇವೆ. ಮುಂಬರುವ ಸದನದಲ್ಲೂ ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಿದ್ದೇವೆ” ಎಂದು ಸಚಿವ ರಾಮಲಿಂಗಾ ರೆಡ್ಡಿ ಪುನರುಚ್ಚರಿಸಿದ್ದಾರೆ.
l











